ಬೆಂಗಳೂರು: ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ, ‘ನಟರಾಕ್ಷಸ’ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿಯ ಬಾಳಿಗೆ ಹೊಸ ಕಳೆ ಬಂದಿದೆ. ಧನಂಜಯ್ ಪತ್ನಿ ಧನ್ಯತಾ ಅವರು ಶುಕ್ರವಾರ ತಡರಾತ್ರಿ ಗಂಡು ಮಗುವಿಗೆ ಜನ್ಮ ನೀಡಿದ್ದು, ಡಾಲಿ ಅಭಿಮಾನಿ ಬಳಗದಲ್ಲಿ ಸಂಭ್ರಮ ಮನೆಮಾಡಿದೆ.
ನಗರದ ಖಾಸಗಿ ಆಸ್ಪತ್ರೆಯಲ್ಲಿ ಧನ್ಯತಾ ಅವರು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಕಳೆದ ವರ್ಷದ ಫೆಬ್ರವರಿ ತಿಂಗಳಿನಲ್ಲಿ ಮೈಸೂರಿನಲ್ಲಿ ಅತ್ಯಂತ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಈ ಜೋಡಿ, ಈಗ ಪೋಷಕರಾಗಿ ಬಡ್ತಿ ಪಡೆದಿದ್ದಾರೆ. ಮದುವೆಯಾದ ಕೆಲವೇ ತಿಂಗಳುಗಳಲ್ಲಿ ಮಗುವಿನ ಆಗಮನವಾಗಿದ್ದು, ಧನಂಜಯ್ ಅವರ ವೈಯಕ್ತಿಕ ಜೀವನದಲ್ಲಿ ಹೊಸ ಸಂತಸ ತಂದಿದೆ.
ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯಗಳ ಮಹಾಪೂರ
ತಮ್ಮ ಮನೆಗೆ ಪುಟ್ಟ ಅತಿಥಿ ಬಂದಿರುವ ವಿಷಯವನ್ನು ಡಾಲಿ ಧನಂಜಯ್ ಅವರು ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಂಡಿದ್ದು, ಅಭಿಮಾನಿಗಳು ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.








