ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆಯಾಗಿದ್ದು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷ ಸ್ಥಾನದ ರೇಸ್ ನಲ್ಲಿದ್ದ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ನಿರಾಸೆಯಾಗಿದೆ ಎನ್ನಲಾಗಿದೆ. ಅವರ ಬದಲಿಗೆ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ (MLC) ಬಿ.ಕೆ. ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ ಕಟ್ಟಲು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿದೆ ಎಂದು ನಂಬಲರ್ಹ ಮೂಲಗಳು ತಿಳಿಸಿವೆ.
ಹಾಲಿ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವುದರಿಂದ, ತೆರವಾಗಲಿರುವ ಅಧ್ಯಕ್ಷ ಸ್ಥಾನಕ್ಕೆ ಹೊಸ ಮುಖದ ಆಯ್ಕೆ ಕುರಿತು ಕಾಂಗ್ರೆಸ್ ವಲಯದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಚರ್ಚೆಗಳು ನಡೆಯುತ್ತಿದ್ದವು. ಈ ಹೈಕಮಾಂಡ್ ಮಟ್ಟದ ಚರ್ಚೆಯ ಕೊನೆಯಲ್ಲಿ ಬಿ.ಕೆ. ಹರಿಪ್ರಸಾದ್ ಅವರ ಹೆಸರು ಅಂತಿಮಗೊಂಡಿದೆ ಎನ್ನಲಾಗುತ್ತಿದೆ.
ಬಿ.ಕೆ. ಹರಿಪ್ರಸಾದ್ ಅವರು ದೆಹಲಿ ರಾಜಕಾರಣದಲ್ಲಿ ದೀರ್ಘಕಾಲದ ಅನುಭವ ಹೊಂದಿದ್ದು, ಹೈಕಮಾಂಡ್ ನಾಯಕರೊಂದಿಗೆ ಉತ್ತಮ ಒಡನಾಟ ಹೊಂದಿದ್ದಾರೆ.ಪಕ್ಷವನ್ನು ಸಂಘಟಿಸುವಲ್ಲಿ ಮತ್ತು ಭಿನ್ನಮತಗಳನ್ನು ಶಮನಗೊಳಿಸುವಲ್ಲಿ ಅವರ ಹಿರಿತನ ಸಹಕಾರಿಯಾಗಲಿದೆ ಎಂಬುದು ಹೈಕಮಾಂಡ್ ಲೆಕ್ಕಾಚಾರ.
ಪಕ್ಷದ ಉನ್ನತ ನಾಯಕತ್ವವು ಈಗಾಗಲೇ ಬಿ.ಕೆ. ಹರಿಪ್ರಸಾದ್ ಅವರ ಹೆಸರನ್ನು ಬಹುತೇಕ ಖಚಿತಪಡಿಸಿದ್ದು, ಮುಂದಿನ ಕೆಲವು ಗಂಟೆಗಳಲ್ಲಿ ಅಥವಾ ದಿನಗಳಲ್ಲಿ ಹೈಕಮಾಂಡ್ನಿಂದ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆಯಿದೆ ಎಂದು ಮೂಲಗಳು ಸೂಚಿಸಿವೆ.








