ಉಡುಪಿ : ಪಾಕಿಸ್ತಾನದಲ್ಲಿರುವವರಿಗೆ ಬಾರತೀಯ ನೌಕಾಪಡೆಗೆ ಸಂಬಂಧಿಸಿದ ಗೌಪ್ಯ ಮಾಹಿತಿ ಹಂಚಿಕೊಂಡ ಆರೋಪದಲ್ಲಿ ಉಡುಪಿಯಲ್ಲಿ ಮತ್ತೊಬ್ಬನ ಬಂಧನವಾಗಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಬಂಧಿತ ಆಲಿಫ್ ಇಸ್ಲಾಂ ಬಾಂಗ್ಲೇದೇಶ ಮೂಲದವನೇ ಎಂಬ ಶಂಕೆಯೂ ವ್ಯಕ್ತವಾಗಿದ್ದು, ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬಂಧಿತನನ್ನು ಪಶ್ಚಿಮ ಬಂಗಾಳ ಮೂಲದ 21 ವರ್ಷದ ಆಲಿಫ್ ಇಸ್ಲಾಂ ಎಂದು ಗುರುತಿಸಲಾಗಿದೆ. ಆತ ಪ್ರಸ್ತುತ ಕೇರಳದ ಇಡುಕ್ಕಿ ಜಿಲ್ಲೆಯ ಮರಾಯು ಗ್ರಾಮದಲ್ಲಿ ವಾಸಿಸುತ್ತಿದ್ದ ಎನ್ನಲಾಗಿದೆ. ಬಂಧಿತ ಬಾಂಗ್ಲಾದೇಶದ ಪ್ರಜೆ ಆಗಿರಬಹುದೆಂಬ ಅನುಮಾನವನ್ನೂ ಪೊಲೀಸರು ವ್ಯಕ್ತಪಡಿಸಿದ್ದಾರೆ.
ಮಲ್ಪೆ ಬಂದರಿನ ಕೊಚ್ಚಿನ್ ಶಿಪ್ ಯಾರ್ಡ್‌ಗೆ ಸಂಬಂಧಿಸಿದ ನೌಕರರು ನೌಕಾಪಡೆಯ ಹಡಗುಗಳ ಸಂಖ್ಯೆಗಳ ಗೋಪ್ಯ ಮಾಹಿತಿಯನ್ನು ವಾಟ್ಸ್ಆ್ಯಪ್ ಮತ್ತು ಫೇಸ್‌ಬುಕ್ ಮೂಲಕ ಪಾಕಿಸ್ತಾನದ ಜತೆ ಹಂಚಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಈ ಪ್ರಕರಣದಲ್ಲಿ ಈಗಾಗಲೇ 2025ರ ನವೆಂಬರ್ ಹಾಗೂ ಡಿಸೆಂಬರ್ನಲ್ಲಿ ಗುಜರಾತ್ ಮೂಲದ ಹಿರೇಂದ್ರ ಕುಮಾರ್, ಉತ್ತರ ಪ್ರದೇಶದ ರೋಹಿತ್ ಮತ್ತು ಸಂತ್ರಿ ಎಂಬವರನ್ನು ಬಂಧಿಸಲಾಗಿತ್ತು. ಇದೀಗ ಮತ್ತೊಬ್ಬನ ಬಂಧನದೊಂದಿಗೆ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಆರೋಪಿಗಳು ಕಳೆದ ಒಂದೂವರೆ ವರ್ಷಗಳಿಂದ ಹಡಗುಗಳಿಗೆ ಸಂಬಂಧಿಸಿದ ರಹಸ್ಯ ಮಾಹಿತಿ, ತಾಂತ್ರಿಕ ಮಾಹಿತಿಗಳನ್ನು ವಾಟ್ಸ್ಆ್ಯಪ್ ಮೂಲಕ ಪಾಕಿಸ್ತಾನದಲ್ಲಿ ಸಂಪರ್ಕದಲ್ಲಿದ್ದವರಿಗೆ ಕಳುಹಿಸುತ್ತಿದ್ದರು ಎನ್ನಲಾಗಿತ್ತು.








