ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ತಾಲ್ಲೂಕಿನ ಬೈರಾಪುರ ಗ್ರಾಮದ ಬಳಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 150ಎ ರಲ್ಲಿ ಈ ದುರ್ಘಟನೆ ನಡೆದಿದೆ.
ವೇಗವಾಗಿ ಬಂದ ಲಾರಿಯೊಂದು ಬೊಲೆರೊ ವಾಹನಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದ್ದೇ ಈ ಭೀಕರ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೊಲೆರೊ ವಾಹನವು ಸಂಪೂರ್ಣವಾಗಿ ಜಖಂಗೊಂಡಿದ್ದು, ಅದರಲ್ಲಿದ್ದ ಮೂವರು ಪ್ರಯಾಣಿಕರು ತೀವ್ರ ರಕ್ತಸ್ರಾವ ಹಾಗೂ ಗಂಭೀರ ಗಾಯಗಳಿಂದಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಮೊಳಕಾಲ್ಮೂರು ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯಕ್ಕೆ ಮೃತಪಟ್ಟ ದುರ್ದೈವಿಗಳ ಗುರುತು ಇನ್ನು ಪತ್ತೆಯಾಗಬೇಕದ್ದು, ಪೊಲೀಸರು ಆ ನಿಟ್ಟಿನಲ್ಲಿ ತನಿಖೆ ಚುರುಕುಗೊಳಿಸಿದ್ದಾರೆ. ಅಪಘಾತದ ಬಳಿಕ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು.
ಘಟನೆಗೆ ಸಂಬಂಧಿಸಿದಂತೆ ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೇ ಅಥವಾ ಬೇರೆನಾದರೂ ತಾಂತ್ರಿಕ ದೋಷವಿತ್ತೇ ಎಂಬ ಕೋನದಲ್ಲಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.








