ಬಳ್ಳಾರಿ: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದೆ. ಈ ವೇಳೆ ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್ ನಡೆದಿದೆ.
ಫೈರಿಂಗ್ನಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವನ್ನಪ್ಪಿದ್ದಾರೆ. ವಾಲ್ಮೀಕಿ ಪ್ರತಿಮೆ ಅನಾವರಣ ಕಾರ್ಯಕ್ರಮದ ಬ್ಯಾನರ್ ಕಟ್ಟುವ ವಿಚಾರಕ್ಕೆ ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ನಿವಾಸದ ಎದುರು ಗಲಾಟೆಯಾಗಿ ಫೈರಿಂಗ್ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಬಳ್ಳಾರಿ ಹುಸೇನ್ ನಗರದ ರಾಜಶೇಖರ್(28) ಎಂದು ಗುರುತಿಸಲಾಗಿದೆ.
ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಮತ್ತು ನಾರಾ ಭರತ್ ರೆಡ್ಡಿ ಅವರ ಸಾವಿರಾರು ಬೆಂಬಲಿಗರು ನಡುವೆ ಹೊಡೆದಾಟ ನಡೆದಿದೆ. ಶಾಸಕ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಅಂಗರಕ್ಷಕರು ಗುಂಡು ಹಾರಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಕೂಡ ಗಾಳಿಯಲ್ಲಿ ಗುಂಡು ಹಾರಿಸಿ ಲಾಠಿ ಚಾರ್ಜ್ ಮಾಡಿದ್ದಾರೆ. ಈ ವೇಳೆ ಗುಂಡೇಟಿಗೆ ಓರ್ವ ಬಲಿಯಾಗಿದ್ದಾನೆ. ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಬಳ್ಳಾರಿಯಲ್ಲಿ ಭಾರೀ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿದೆ. ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಸದ್ಯ ರಾಜಶೇಖರ್ ಮೃತದೇಹವನ್ನು ಬಳ್ಳಾರಿ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಘಟನೆ ಕುರಿತು ಗೃಹಸಚಿವ ಪರಮೇಶ್ವರ್ ಶಾಸಕ ನಾರಾ ಭರತ್ ರೆಡ್ಡಿ ಮತ್ತು ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.








