ಮೈಸೂರು: ಸಿದ್ದರಾಮಯ್ಯ ಅವರ ಪುತ್ರ, ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಉಪಮುಖ್ಯಮಂತ್ರಿ (DCM) ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಮೈಸೂರಿನಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.
ನಗರದ ಪ್ರಮುಖ ವೃತ್ತವಾದ ರಾಮಸ್ವಾಮಿ ವೃತ್ತದಲ್ಲಿ ಜಮಾಯಿಸಿರುವ ನೂರಾರು ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯ ಹಾಗೂ ಯತೀಂದ್ರ ಅವರ ಪರವಾಗಿ ಘೋಷಣೆಗಳನ್ನು ಕೂಗುತ್ತಿದ್ದಾರೆ. ಯತೀಂದ್ರ ಸಿದ್ದರಾಮಯ್ಯ ಅವರು ಪಕ್ಷಕ್ಕಾಗಿ ಮತ್ತು ಮೈಸೂರು ಭಾಗದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದು, ಅವರಿಗೆ ಸೂಕ್ತ ಸ್ಥಾನಮಾನ ಸಿಗಬೇಕು ಎಂಬುದು ಕಾರ್ಯಕರ್ತರ ಒತ್ತಾಯವಾಗಿದೆ.
ಪ್ರತಿಭಟನೆಯ ನೇತೃತ್ವ ವಹಿಸಿರುವ ಯೂತ್ ಕಾಂಗ್ರೆಸ್ ಮುಖಂಡರು, ರಾಜ್ಯ ರಾಜಕಾರಣದಲ್ಲಿ ಯತೀಂದ್ರ ಅವರ ನಾಯಕತ್ವದ ಅಗತ್ಯತೆಯನ್ನು ಮನಗಂಡು ಕಾಂಗ್ರೆಸ್ ಹೈಕಮಾಂಡ್ ತಕ್ಷಣವೇ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
“ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವ ಮೂಲಕ ಮೈಸೂರು ಭಾಗಕ್ಕೆ ಮತ್ತಷ್ಟು ಶಕ್ತಿ ತುಂಬಬೇಕು. ಈ ಮೂಲಕ ಹೈಕಮಾಂಡ್ ಕಾರ್ಯಕರ್ತರ ಧ್ವನಿಗೆ ಗೌರವ ನೀಡಬೇಕು,” ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.








