ಮಂಡ್ಯ : ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ರವರ ಅಂತಿಮ ಸಂಸ್ಕಾರವನ್ನು ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಕಾಫಿ ಡೇ ಹತ್ತಿರದ ಖಾಲಿ ಜಾಗದಲ್ಲಿ ನೆರವೇರಿಸಲು ಸಿದ್ಧತೆಗಳು ನಡೆಯುತ್ತಿವೆ.
ಸ್ಥಳಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಪಾರ್ಥಿವ ಶರೀರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಹುಟ್ಟೂರು ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ ಮಧ್ಯಾಹ್ನ 3 ಗಂಟೆಗೆ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು ಎಂದು ತಿಳಿಸಿದ್ದಾರೆ.
“ಬುಧವಾರ (ನಾಳೆ) ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ರಾಜ್ಯಾದ್ಯಂತ ಮೂರು ದಿನ ಶೋಕಾಚಾರಣೆ ಮಾಡಲಾಗುವುದು. ಬುಧವಾರ ಬೆಳಗ್ಗೆ 8 ಗಂಟೆವರೆಗೂ ಎಸ್.ಎಂ. ಕೃಷ್ಣ ಅವರ ಸದಾಶಿವನಗರ ನಿವಾಸದಲ್ಲಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ನಂತರ ಅವರ ಪಾರ್ಥಿವ ಶರೀರವನ್ನು ಮದ್ದೂರಿನ ಸೋಮನಹಳ್ಳಿಗೆ ಕೊಂಡೊಯ್ಯಲಾಗುವುದು. ಅಲ್ಲಿ ಬೆಳಗ್ಗೆ 10.30ರಿಂದ ಮಧ್ಯಾಹ್ನ 2.00ಗಂಟೆವರೆಗೂ ಮಂಡ್ಯ, ಮೈಸೂರು ಭಾಗದ ಜನರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು. ಇಂದು ಸಂಜೆ 5 ಗಂಟೆಗೆ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಸಂತಾಪ ಸೂಚಕ ಸಭೆ ಏರ್ಪಡಿಸಲಾಗಿದೆ. ಪಕ್ಷದ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಹಾಗೂ ಶಾಸಕಾಂಗ ಸಭೆಯನ್ನು ಮುಂದೂಡಲಾಗಿದೆ. ನಾನು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಚೆಲುವರಾಯ ಸ್ವಾಮಿ ಅವರು ಅಂತಿಮ ದರ್ಶನ ಹಾಗೂ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಲು ಮದ್ದೂರಿಗೆ ತೆರಳುತ್ತಿದ್ದೇವೆ ಎಂದು ಹೇಳಿದರು.