ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಬೈಕ್ ನಲ್ಲಿದ್ದ ಸಬ್ ಇನ್ಸ್ ಪೆಕ್ಟರ್ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರು-ಕನಕಪುರ ಮುಖ್ಯರಸ್ತೆಯ ಕಗ್ಗಲೀಪುರ ಪೊಲೀಸ್ ಠಾಣೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ ಬಸ್ ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದು ರಸ್ತೆ ಬದಿ ಪಲ್ಟಿಯಾಗಿದ್ದು, ಬಸ್ ಡಿಕ್ಕಿಯಾದ ಹಿನ್ನೆಲೆಯಲ್ಲಿ ಬೈಕ್ ನಲ್ಲಿದ್ದ ಸಬ್ ಇನ್ಸ್ ಪೆಕ್ಟರ್ ನಾಗರಾಜು ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಗ್ಗಲೀಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.