ವಿಜಯಪುರ: ರಾಜ್ಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಲೋಣಿ ಕ್ರಾಸ್ ಬಳಿ ಸರ್ಕಾರಿ ಬಸ್ ಹಾಗೂ ಟಿಪ್ಪರ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ವೇಗವಾಗಿ ಚಲಿಸುತ್ತಿದ್ದ ಟಿಪ್ಪರ್ ವಾಹನದ ಟೈರ್ ದಿಢೀರನೆ ಸ್ಫೋಟಗೊಂಡಿದೆ. ಇದರಿಂದಾಗಿ ನಿಯಂತ್ರಣ ತಪ್ಪಿದ ಟಿಪ್ಪರ್, ಎದುರಿನಿಂದ ಬರುತ್ತಿದ್ದ ಸರ್ಕಾರಿ ಬಸ್ ಗೆ ನೇರವಾಗಿ ಧಾವಿಸಿ ಭೀಕರವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆ ಎಷ್ಟಿತ್ತೆಂದರೆ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಜ್ಜುಗುಜ್ಜಾಗಿದೆ.
ಈ ಭೀಕರ ದುರಂತದಲ್ಲಿ ಟಿಪ್ಪರ್ ಚಾಲಕ ಅಶೋಕ್ ಉಟಗಿ ಮತ್ತು ಅವರ ಪತ್ನಿ ರಾಧಾಬಾಯಿ ಉಟಗಿ ಹಾಗೂ ಸರ್ಕಾರಿ ಬಸ್ ಚಾಲಕ ಹನುಮಂತ ಛಲವಾದಿ ಅವರು ತೀವ್ರ ರಕ್ತಸ್ರಾವದಿಂದಾಗಿ ಘಟನಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಅಪಘಾತದಲ್ಲಿ ಬಸ್ ನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದು, ಕಿರುಚಾಟ-ಆಕ್ರಂದನ ಮುಗಿಲು ಮುಟ್ಟಿತ್ತು. ಸ್ಥಳೀಯರು ತಕ್ಷಣವೇ ಧಾವಿಸಿ ಗಾಯಾಳುಗಳನ್ನು ರಕ್ಷಿಸಿದ್ದು, ಸದ್ಯ ಎಲ್ಲರನ್ನೂ ಸಮೀಪದ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ಕೊಡಿಸಲಾಗುತ್ತಿದೆ.
ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಚಡಚಣ ಪೊಲೀಸ್ ಠಾಣೆಯ ಪಿಎಸ್ಐ ಸೋಮೇಶ್ ಗೆಜ್ಜಿ ಅವರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.








