ಬೆಂಗಳೂರು : ಇರಾನ್ ಹೆಸರಲ್ಲಿ ಯುದ್ಧದ ಪರಿಣಾಮ ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಆದರೆ ಇದೀಗ ರಾಜ್ಯದಲ್ಲಿ ಅಡುಗೆ ಅನಿಲದ ಕೊರತೆಯಿಲ್ಲ, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕೃತ ಸುತ್ತೋಲೆ ಹೊರಡಿಸಿದೆ.
ಹೌದು ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಅಡುಗೆ ಅನಿಲ (LPG) ಅಭಾವ ಉಂಟಾಗಲಿದೆ ಎಂಬ ಆತಂಕ ಸಾರ್ವಜನಿಕರಲ್ಲಿ ಮನೆ ಮಾಡಿತ್ತು. ಪ್ರಮುಖವಾಗಿ ಹೋಟೆಲ್, ಶಾಲೆ-ಕಾಲೇಜು, ದೇವಾಲಯಗಳ ದಾಸೋಹ ಭವನ, ಇಂದಿರಾ ಕ್ಯಾಂಟೀನ್ ಹಾಗೂ ಐಟಿ ಕಂಪನಿಗಳ ಕ್ಯಾಂಟೀನ್‌ಗಳಲ್ಲಿ ಗ್ಯಾಸ್ ಸಮಸ್ಯೆ ಎದುರಾದ ಬೆನ್ನಲ್ಲೇ ಜನಸಾಮಾನ್ಯರು ಆತಂಕಕ್ಕೆ ಒಳಗಾಗಿದ್ದರು.
ಈ ಹಿನ್ನೆಲೆ ರಾಜ್ಯದಲ್ಲಿ ಅಡುಗೆ ಅನಿಲದ ಕೊರತೆಯಿಲ್ಲ, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕೃತ ಸುತ್ತೋಲೆ ಹೊರಡಿಸಿದೆ. ಗ್ಯಾಸ್ ಅಭಾವವಾಗಬಹುದು ಎಂಬ ಭೀತಿಯಲ್ಲಿ ಅನೇಕ ಗ್ರಾಹಕರು ಮುನ್ನೆಚ್ಚರಿಕೆ ಕ್ರಮವಾಗಿ ಅಥವಾ ಗಾಬರಿಯಿಂದ ಅನಗತ್ಯವಾಗಿ ಸಿಲಿಂಡರ್ ಬುಕಿಂಗ್ ಮಾಡುತ್ತಿದ್ದಾರೆ. ಇದರಿಂದ ಮಾರುಕಟ್ಟೆಯಲ್ಲಿ ಕೃತಕ ಬೇಡಿಕೆ ಸೃಷ್ಟಿಯಾಗುತ್ತಿದೆ. ‘ಗ್ರಾಹಕರು ಆತಂಕಕ್ಕೆ ಒಳಗಾಗಿ ತುರ್ತು ಮತ್ತು ಅನಗತ್ಯ ಬುಕಿಂಗ್ ಮಾಡಬಾರದು. ಮಾರುಕಟ್ಟೆಯಲ್ಲಿ ಸಮತೋಲನ ಕಾಪಾಡಲು ಸಹಕರಿಸಬೇಕು’ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಇದಕ್ಕೂ ಮೊದಲು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಅವರು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು. ಈ ಸಭೆಯಲ್ಲಿ ಪ್ರಮುಖ ತೈಲ ಕಂಪನಿಗಳಾದ ಐಒಸಿ (IOC), ಬಿಪಿಸಿ (BPC), ಎಚ್‌ಪಿಸಿ (HPC) ಮತ್ತು ಗೈಲ್ (GAIL) ಸಂಸ್ಥೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಅನಿಲ ಕಂಪನಿಗಳ ಅಧಿಕಾರಿಗಳಾದ ನೀರಾ ಸಿಂಗ್, ಅರುಂದಿ ಗೊಯಲ್, ದಿವ್ಯ ಸೇರಿದಂತೆ ಹಲವು ತಜ್ಞರು ಪೂರೈಕೆಯ ಸ್ಥಿತಿಗತಿ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು.








