ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಭಾರೀ ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಬೆಂಗಳೂರಿನ ಮೆಜೆಸ್ಟಿಕ್, ಶಾಂತಿನಗರ, ಕಾರ್ಪೋರೇಷನ್ ಸರ್ಕಲ್, ಕೆ.ಆರ್. ಮಾರ್ಕೆಟ್, ವಿಧಾನಸೌಧ, ಶಿವಾಜಿನಗರ, ಜಯನಗರ, ಶ್ರೀನಗರ, ಹನುಮಂತನಗರ, ತ್ಯಾಗರಾಜನಗರ, ಕೋರಮಂಗಲ ಸೇರಿದಂತೆ ಹಲವಡೆ ಭಾರೀ ಮಳೆಯಾಗುತ್ತಿದ್ದು, ಕೆಲಸಗಳಿಂದ ಮನೆಗೆ ವಾಪಸ್ ಆಗುವ ವಾಹನ ಸವಾರರು ಪರದಾಡುವಂತಾಗಿದೆ.
ಬೆಂಗಳೂರು ಮಾತ್ರವಲ್ಲದೇ ತುಮಕೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ಮಳೆಯ ಆರ್ಭಟ ಶುರುವಾಗಿದ್ದು, ಹೊರಗೆ ಹೋಗದೇ ಜನರು ಮನೆಯಲ್ಲೇ ಉಳಿಯುವಂತಾಗಿದೆ.
ರಾಜ್ಯದಲ್ಲಿ 3 ದಿನ ಭಾರೀ ಮಳೆ ಮುನ್ಸೂಚನೆ
ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ, ಒಳನಾಡು ಭಾಗದಲ್ಲಿ ಬುಧವಾರದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ನಾಳೆಯಿಂದ ಒಂದು ವಾರ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಂದಿನಿಂದ ಮೂರು ದಿನ ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.