ಲುಧಿಯಾನ: ಪಂಜಾಬ್‌ನ ಲುಧಿಯಾನದಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಇಲ್ಲಿನ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯೊಂದರಲ್ಲಿ ವಿಷಾನಿಲ ಸೋರಿಕೆಯಾದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ನಾಲ್ವರು ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ.
ಕಾರ್ಖಾನೆಯಲ್ಲಿ ಕೆಲಸ ನಡೆಯುತ್ತಿದ್ದ ಸಂದರ್ಭದಲ್ಲಿ ಹಠಾತ್ತನೆ ವಿಷಾನಿಲ ಸೋರಿಕೆಯಾಗಿದೆ ಎನ್ನಲಾಗಿದೆ. ಅನಿಲದ ತೀವ್ರತೆಗೆ ಸಿಲುಕಿ ಸ್ಥಳದಲ್ಲಿದ್ದ ಮೂವರು ಕಾರ್ಮಿಕರು ಉಸಿರುಗಟ್ಟಿ ಕೊನೆಯುಸಿರೆಳೆದಿದ್ದಾರೆ.
ನಾಲ್ಕು ಜನ ಕಾರ್ಮಿಕರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.ಘಟನೆ ನಡೆದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ಕಾರ್ಖಾನೆಯ ಸುತ್ತಮುತ್ತಲಿನ ಪ್ರದೇಶವನ್ನು ಮುನ್ನೆಚ್ಚರಿಕಾ ಕ್ರಮವಾಗಿ ಸೀಲ್ ಮಾಡಲಾಗಿದ್ದು, ಅನಿಲ ಸೋರಿಕೆಗೆ ನಿಖರ ಕಾರಣ ಏನೆಂಬುದನ್ನು ಪತ್ತೆ ಹಚ್ಚಲು ತನಿಖೆ ಮುಂದುವರಿದಿದೆ.








