ಬೆಳಗಾವಿ : ಹತ್ತಿ ಬಿಡಿಸುವ ಕೂಲಿ ಕಾರ್ಮಿಕರು ಕೆಲಸ ಮುಗಿಸಿಕೊಂಡು ವಾಪಸ್ ಆಗುತ್ತಿದ್ದ ವೇಳೆ, ಕ್ರೂಜರ್ ಒಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬಾಲಕ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಗ್ರಾಮದ ಹೊರವಲಯದಲ್ಲಿ ತಡ ರಾತ್ರಿ ಘಟನೆ ಸಂಭವಿಸಿದೆ.
ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದ ಜನರು ಹತ್ತಿ ಬಿಡಿಸುವ ಕೆಲಸಕ್ಕೆಂದು ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹೆಬ್ಬಳ್ಳಿ ಗ್ರಾಮಕ್ಕೆ ತೆರಳಿದ್ದರು. ಕೆಲಸ ಮುಗಿಸಿ ಸ್ವಗ್ರಾಮ ಚುಂಚನೂರಿಗೆ ತೆರಳುತ್ತಿದ್ದಾಗ ಅಪಘಾತ ಘಟಿಸಿದೆ. ಚುಂಚನೂರು ಗ್ರಾಮದ ಕೆಂಚಪ್ಪ ಈರಣ್ಣವರ (50) ಸ್ಥಳದಲ್ಲೇ ಮೃತಪಟ್ಟರೆ, 16 ವರ್ಷದ ಬಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.
ಗಾಯಾಳುಗಳ ಪೈಕಿ ಮೂವರ ಸ್ಥಿತಿ ಗಂಭೀರವಾಗಿದ್ದು, ಸವದತ್ತಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಕ್ರೂಸರ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು. ಅಪಘಾತದ ಕುರಿತಂತೆ ಸೌದತ್ತಿ ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಸವದತ್ತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.