ಬೆಂಗಳೂರು : ಮುಂಬರುವ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಚುನಾವಣಾ ಆಯುಕ್ತ ಸಂಗ್ರೇಶ್ ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ನಮ್ಮ ಬಳಿ ಇರುವ ಇವಿಎಂ ಮಷಿನ್ ಗಳು ಹಳೆಯದಾಗಿವೆ. ಅವುಗಳನ್ನು ಡಿಸ್ಪೋಸ್ ಮಾಡುವಂತೆ ಇಸಿಐ ಸೂಚನೆ ನೀಡಿದೆ. ಬ್ಯಾಲೆಟ್ ಪೇಪರ್ ಬಳಸಿ ಚುನಾವನೆ ಮಾಡಿದ್ರೆ ತಪ್ಪಿಲ್ಲ. ನಾವು ಅದಕ್ಕೆ ಬೇಕಾದ ಸಿದ್ದತೆ ಮಾಡಿಕೊಳ್ಳಲು ರೆಡಿ ಇದ್ದೇವೆ. ಈಗ ರಾಜ್ಯ ಸರ್ಕಾರ ಕೂಡ ಇದನ್ನೇ ಶಿಫಾರಸು ಮಾಡಿದೆ ಎಂದು ತಿಳಿಸಿದ್ದಾರೆ.
ನಗರ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಬಳಕೆ ಮತ್ತು ರಾಜ್ಯ ಚುನಾವಣಾ ಆಯೋಗದ ನೇತೃತ್ವದಲ್ಲಿ ಪ್ರತ್ಯೇಕ ಮತದಾರರ ಪಟ್ಟಿ ಸಿದ್ಧಪಡಿಸಲು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮುಂದಾಗಿದ್ದು, ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.
ಬಿಜೆಪಿ ನೇತೃತ್ವದ ಎನ್.ಡಿ.ಎ. ಸರ್ಕಾರ ಮತ್ತು ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನ ಆರೋಪ ಹೊರಿಸಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೋರಾಟ ನಡೆಸುತ್ತಿದ್ದಾರೆ. ತಮ್ಮ ಪಕ್ಷದ ನಾಯಕನ ಹೋರಾಟಕ್ಕೆ ಬೆಂಬಲ ಸೂಚಿಸುವ ರೀತಿಯಲ್ಲಿ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಕೇಂದ್ರಕ್ಕೆ ಸೆಡ್ಡು ಹೊಡೆದು ಹೊಸ ಹೆಜ್ಜೆ ಇಟ್ಟಿದೆ.