ಪಶ್ಚಿಮಬಂಗಾಳ : ಪಶ್ಚಿಮ ಬಂಗಾಳ ಬಿಜೆಪಿ ಪಟ್ಟಾಭಿಷೇಕಕ್ಕೆ ಇದೀಗ ಮುಹೂರ್ತ ಫಿಕ್ಸ್ ಆಗಿದ್ದು ಮೇ 9ಕ್ಕೆ ಬೆಳಿಗ್ಗೆ 11 ಗಂಟೆಗೆ ನೂತನ ಮುಖ್ಯಮಂತ್ರಿ ಪದಗ್ರಹಣ ಸಮಾರಂಭ ನಡೆಯಲಿದೆ. ಕೊಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಸಮಾರಂಭ ನಡೆಯಲಿದ್ದು, ಮೇ 8ರಂದು ಸಂಜೆ 4 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ಒಂದು ಸಭೆಯಲ್ಲಿ ಬಿಜೆಪಿ ನಾಯಕರು ಸಿಎಂ ಹೆಸರನ್ನು ಘೋಷಣೆ ಮಾಡಲಿದ್ದಾರೆ, ಬಳಿಕ ರಾಜಪಾಲರನ್ನು ಭೇಟಿಯಾಗಿ ಹಕ್ಕು ಮಂಡನೆ ಆಗಲಿದೆ.
ಸಂಜೆ 4 ಗಂಟೆಗೆ ಶಾಸಕಾಂಗ ಪಕ್ಷದ ಸಭೆ: ಮುಖ್ಯಮಂತ್ರಿ ಪಟ್ಟ ಯಾರಿಗೆ ಒಲಿಯಲಿದೆ ಎಂಬ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ. ಇಂದು ಸಂಜೆ 4 ಗಂಟೆಗೆ ಬಿಜೆಪಿಯ ಶಾಸಕಾಂಗ ಪಕ್ಷದ ಮಹತ್ವದ ಸಭೆಯನ್ನು ಕರೆಯಲಾಗಿದೆ. ಈ ಸಭೆಯಲ್ಲಿ ಹಿರಿಯ ನಾಯಕರು ಮತ್ತು ವೀಕ್ಷಕರ ಸಮ್ಮುಖದಲ್ಲಿ ಶಾಸಕರು ತಮ್ಮ ನಾಯಕನನ್ನು ಆರಿಸಲಿದ್ದಾರೆ. ಈ ಸಭೆಯ ಮುಕ್ತಾಯದ ನಂತರ ಬಿಜೆಪಿ ಅಧಿಕೃತವಾಗಿ ನೂತನ ಮುಖ್ಯಮಂತ್ರಿಯ ಹೆಸರನ್ನು ಘೋಷಣೆ ಮಾಡಲಿದೆ.
ಬೆಳಿಗ್ಗೆ 11ಕ್ಕೆ ಪದಗ್ರಹಣ ಸಮಾರಂಭ: ನಿಗದಿತ ಕಾರ್ಯಕ್ರಮದಂತೆ, ಬೆಳಿಗ್ಗೆ 11 ಗಂಟೆಗೆ ಸರಿಯಾಗಿ ನೂತನ ಮುಖ್ಯಮಂತ್ರಿಗಳ ಪದಗ್ರಹಣ ಸಮಾರಂಭ ಆರಂಭವಾಗಲಿದೆ. ರಾಜ್ಯಪಾಲರು ನೂತನ ಸಿಎಂ ಮತ್ತು ಅವರ ಸಂಪುಟದ ಸಹೋದ್ಯೋಗಿಗಳಿಗೆ ಅಧಿಕಾರ ಹಾಗೂ ಗೌಪ್ಯತೆಯ ಬೋಧನೆ ಮಾಡಲಿದ್ದಾರೆ. ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆಯಲಿರುವ ಈ ಸಮಾರಂಭಕ್ಕೆ ಲಕ್ಷಾಂತರ ಕಾರ್ಯಕರ್ತರು ಮತ್ತು ರಾಷ್ಟ್ರೀಯ ನಾಯಕರು ಆಗಮಿಸುವ ನಿರೀಕ್ಷೆಯಿದೆ.
ರಾಜಭವನಕ್ಕೆ ಭೇಟಿ – ಸರ್ಕಾರ ರಚನೆಗೆ ಹಕ್ಕು ಮಂಡನೆ: ಶಾಸಕಾಂಗ ಪಕ್ಷದ ಸಭೆಯ ನಂತರ ನೂತನ ನಾಯಕನ ನೇತೃತ್ವದಲ್ಲಿ ಬಿಜೆಪಿ ನಿಯೋಗವು ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಲಿದೆ. ತಮ್ಮ ಪಕ್ಷಕ್ಕೆ ಇರುವ ಬಹುಮತದ ದಾಖಲೆಗಳನ್ನು ಸಲ್ಲಿಸಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಆ ನಂತರ ರಾಜ್ಯಪಾಲರು ಸರ್ಕಾರ ರಚಿಸಲು ಅಧಿಕೃತ ಆಹ್ವಾನ ನೀಡಲಿದ್ದಾರೆ.
ಬಿಗಿ ಭದ್ರತೆ: ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆಯಲಿರುವ ಈ ಬೃಹತ್ ಸಮಾರಂಭದ ಹಿನ್ನೆಲೆಯಲ್ಲಿ ಕೋಲ್ಕತ್ತಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ವಿವಿಐಪಿಗಳ ಆಗಮನವಿರುವುದರಿಂದ ಸಂಚಾರ ವ್ಯವಸ್ಥೆಯಲ್ಲೂ ಬದಲಾವಣೆ ಮಾಡಲಾಗಿದ್ದು, ಇಡೀ ನಗರವೇ ಕೇಸರಿಮಯವಾಗಿ ಕಂಗೊಳಿಸುತ್ತಿದೆ.







