ಬೆಂಗಳೂರು: ಬಜೆಟ್ ಅಧಿವೇಶನದಲ್ಲಿ ಶ್ವೇತ ಪತ್ರ ಹೊರಡಿಸಲಾಗುವುದು ಅಂತ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಇದೇ ವೇಳೆ ಅವರು ಮಾತನಾಡಿ 14ನೇ ಹಣಕಾಸು ಆಯೋಗದಂತೆ ರಾಜ್ಯಕ್ಕೆ ಶೇ 42ರಷ್ಟು ಹಣ ನೀಡಬೇಕು. 15ನೇ ಹಣಕಾಸು ಆಯೋಗದಂತೆ ರಾಜ್ಯಕ್ಕೆ ಶೇ 41ರಷ್ಟು ಹಣ ನೀಡಬೇಕು. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕವೇ ಈ ಆಯೋಗ ರಚನೆ ಆಗಿತ್ತು ಎಂದು ಸಿದ್ದರಾಮಯ್ಯ ಹೇಳಿದರು.
ರಾಜ್ಯದಿಂದ 4 ಲಕ್ಷ 30 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹವಾಗುತ್ತಿದೆ. ತೆರಿಗೆ ಸಂಗ್ರಹದಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ. 100 ರೂ. ತೆರಿಗೆ ಕಟ್ಟಿದರೆ ನಮಗೆ ಶೇ 12-13ರಷ್ಟು ವಾಪಸ್ ಬರುತ್ತಿದೆ. ಆದರೆ, ಕರ್ನಾಟಕಕ್ಕೆ ಅನ್ಯಾಯವಾಗಿಲ್ಲವೆಂದು ರಾಜ್ಯ ಬಿಜೆಪಿ ನಾಯಕರು ಹೇಳುತ್ತಾರೆ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.