ವಿಜಯಪುರ : ಸ್ವಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿದ್ದು ಅಲ್ಲದೆ, ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ನೀಡಿದ್ದ ನೋಟಿಸ್ ಗೆ ಉತ್ತರಿಸದ ಹಿನ್ನೆಲೆಯಲ್ಲಿ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಕ್ರಮ ಕೈಗೊಂಡಿತ್ತು. ಆದರೆ ಇದಕ್ಕೆ ಯಾವುದಕ್ಕೂ ಜಗ್ಗದೆ ಬಗದೇ ಶಾಸಕ ಯತ್ನಾಳ್ ಬಿಎಸ್ ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ. 2028 ರಲ್ಲಿ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ.
ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮಾತನಾಡಿದ್ದು, ಮತ್ತೆ ಬಿ.ಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಂತ್ರಿ ಆಗಿ ಎಂದು ಆಗ ಬಸವರಾಜ ಬೊಮ್ಮಾಯಿ ಹೇಳಿದ್ದರು. ಆಗ ನಾನು ಅಭಿವೃದ್ಧಿಗೆ ಹಣ ಕೊಡಿ ಮಂತ್ರಿಗಿರಿ ಬೇಡ ಎಂದು ನಾನು ಅವರಿಗೆ ಹೇಳಿದ್ದೆ. ಕಾರಿನ ಮೇಲೆ ಕೆಂಪು ಗೂಟ ಹಾಕಿಕೊಂಡು ಓಡಾಡುವ ಶೋಕಿ ನನಗೆ ಇಲ್ಲ ಪಕ್ಷಕ್ಕೆ ವಾಪಸ್ ಸೇರಿಸಿಕೊಳ್ಳಿ ಎಂದು ನಾನು ಕೈ ಮುಗಿಯುವುದಿಲ್ಲ. ನಾನು ಬಿಜೆಪಿಗೆ ಸೇರಿಸಿಕೊಳ್ಳಿ ಎಂದು ಯಾರ ಕೈಕಾಲು ಕೂಡ ಹಿಡಿಯುವುದಿಲ್ಲ. ನನ್ನ ಪರವಾಗಿ ಸಾಕಷ್ಟು ಜನರು ನಿಂತಿದ್ದಾರೆ ಎಂದು ವಿಜಯಪುರದಲ್ಲಿ ಶಾಸಕ ಯತ್ನಾಳ್ ಹೇಳಿಕೆ ನೀಡಿದರು.