ಬೆಂಗಳೂರು : ಧಾರವಾಡದಲ್ಲಿ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ಆದೇಶ ಕಾಯ್ದಿರಿಸಿ ಆದೇಶ ಹೊರಡಿಸಿದೆ.
ಇದಕ್ಕೂ ಮುನ್ನ ವಾದ ಮುಂದುವರೆಸಿದ ಕುಲಕರ್ಣಿ ಪರ ವಕೀಲರು, ಕೊಲೆ ಪ್ರಕರಣದಲ್ಲಿ ಅರ್ಜಿದಾರರ ಯಾವುದೇ ಪಾತ್ರವಿಲ್ಲ. ಕೊಲೆಯಾದ ಸ್ಥಳದಲ್ಲಿಯೂ ಹಾಜರಿರಲಿಲ್ಲ. ಪ್ರಕರಣದಲ್ಲಿ ಇತರೆ ಆರೋಪಿಗಳಿಗೆ ಈಗಾಗಲೇ ಜಾಮೀನು ಮಂಜೂರಾಗಿದೆ. ಜಾಮೀನು ರದ್ದುಪಡಿಸಿ ಆದೇಶಿಸುವುದಕ್ಕೂ ಜಾಮೀನು ನೀಡುವ ಸಂದರ್ಭದಲ್ಲಿ ವಿಧಿಸುವ ಷರತ್ತುಗಳನ್ನು ಉಲ್ಲಂಘಿಸುವುದಕ್ಕೂ ಸಾಕಷ್ಟು ವ್ಯತ್ಯಾಸವಿದೆ ಎಂದರು.
ಅರ್ಜಿದಾರರಿಗೆ ಜಾಮೀನು ಮಂಜೂರು ಮಾಡಿರುವುದು ತಪ್ಪು ಎಂದು ಸುಪ್ರೀಂ ಕೋರ್ಟ್ ತಿಳಿಸಿಲ್ಲ. ಆದರೆ, ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಆರೋಪದಲ್ಲಿ ಮಾತ್ರ ಜಾಮೀನು ರದ್ದುಮಾಡಿ ಆದೇಶಿಸಿದ್ದು, ಆದೇಶದಲ್ಲಿ ಹೊಸದಾಗಿ ಜಾಮೀನು ಅರ್ಜಿ ಸಲ್ಲಿಸಬಹುದು ಎಂಬುದಾಗಿ ತಿಳಿಸಿದೆ. ಆದ್ದರಿಂದ ಅರ್ಜಿದಾರರ ವಿರುದ್ಧ ಇಬ್ಬರು ಅಧಿಕಾರಿಗಳ ಪಾಟಿ ಸವಾಲು ಬಾಕಿ ಇದೆ. ಹಾಗಾಗಿ ಜಾಮೀನು ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು.








