ಚಾಮರಾಜನಗರ: ಅರಣ್ಯದ ಅಂಚಿನ ಗ್ರಾಮಗಳಿಗೆ ಹುಲಿ, ಚಿರತೆಗಳು ನುಗ್ಗಿ ಜನ – ಜಾನುವಾರುಗಳ ಮೇಲೆ ದಾಳಿ ಮಾಡುವುದು ಸಾಮಾನ್ಯವಾಗಿದೆ. ಜೀವ ಭಯದಲ್ಲಿರುವ ಜನರಿಗೆ ಅರಣ್ಯ ಇಲಾಖೆ ನೆರವು ನೀಡುತ್ತಿಲ್ಲ ಎಂದು ಆರೋಪಿಸಿ, ಹುಲಿ ಹಿಡಿಯಲು ಇಟ್ಟಿದ್ದ ಬೋನಿನಲ್ಲಿ ಸಿಬ್ಬಂದಿ ಕೂಡಿ ಹಾಕಿದ ಘಟನೆ ತಾಲೂಕಿನ ಬೊಮ್ಮಲಾಪುರದಲ್ಲಿ ಇಂದು ನಡೆದಿದೆ.
ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಐವರ ವಿರುದ್ಧ FIR ದಾಖಲಾಗಿದೆ.ಬೊಮ್ಮಲಪುರ ಗ್ರಾಮದ 5 ಜನರ ವಿರುದ್ಧ FIR ದಾಖಲಾಗಿದೆ. ಅರಣ್ಯ ಸಿಬ್ಬಂದಿಗಳು ನೌಕರರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ ಎಂದು ದೂರು ನೀಡಿದ ಹಿನ್ನೆಲೆ ಬಂಡೀಪುರ ಸಿಎಫ್ ಸೂಚನೆಯಂತೆ ಗುಂಡ್ಲುಪೇಟೆ ಠಾಣೆಗೆ ದೂರು ನೀಡಿದ್ದರು. ಸಿಬ್ಬಂದಿ ನೀಡಿದ ದೂರಿನ ಅನ್ವಯ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.
ಪ್ರಕರಣ ಹಿನ್ನೆಲೆ?
ಹುಲಿ, ಚಿರತೆ ದಾಳಿಗೆ ಬೇಸತ್ತ ರೈತರು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಆಕ್ರೋಶ ವ್ಯಕ್ತಪಡಿಸಿ, ಸ್ಥಳಕ್ಕೆ ಹುಲಿ ಹಿಡಿಯಲು ಎಂದು ಬಂದಿದ್ದ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಜನರು ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರಾಣ ಭಯದಲ್ಲಿ ಜೀವ ನಡೆಸುತ್ತಿರುವ ನಮಗೆ ರಕ್ಷಣೆ ನೀಡುತ್ತಿಲ್ಲ ಎಂದು ಜಮೀನಿನಲ್ಲಿ ಇದ್ದ ಬೋನಿನಲ್ಲಿ ಸಿಬ್ಬಂದಿ ಕೂಡಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು.
ಕಳೆದ 2 ತಿಂಗಳಿನಿಂದ ಗ್ರಾಮದ ಹೊರವಲಯದಲ್ಲಿ ಹುಲಿ ಹಾಗೂ ಚಿರತೆ ಕಾಣಿಸಿಕೊಳ್ಳುತ್ತಿವೆ. ಈ ಬಗ್ಗೆ ಜನರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅದರಂತೆ, ಬೊಮ್ಮಲಾಪುರ ಗ್ರಾಮದ ಗಂಗಪ್ಪ ಎಂಬವರ ಜಮೀನಿನಲ್ಲಿ ಬೋನು ಇಡಲಾಗಿದೆ. ಇಂದು ಹುಲಿ ಮತ್ತೆ ಕಾಣಿಸಿಕೊಂಡಿದ್ದು, ಈ ಬಗ್ಗೆ ಜನರು ಅರಣ್ಯ ಸಿಬ್ಬಂದಿಗೆ ಮಾಹಿತಿ ರವಾನಿಸಿದ್ದಾರೆ.
ಗ್ರಾಮದ ಹೊರಭಾಗದಲ್ಲಿ ಹುಲಿ ಕಾಣಿಸಿಕೊಂಡಿದೆ ಎಂದು ಮಾಹಿತಿ ನೀಡಿದ್ದರೂ ಅರಣ್ಯ ಇಲಾಖೆ ಸಿಬ್ಬಂದಿ ತಡವಾಗಿ ಬಂದಿದ್ದಾರೆ. ಇದರಿಂದ ಕುಪಿತಗೊಂಡ ಜನರು ಗಾರ್ಡ್, ವಾಚರ್ ಸೇರಿ 7 ಮಂದಿಯನ್ನು ಅವರೇ ಇಟ್ಟಿದ್ದ ಬೋನಿನಲ್ಲಿ ಕೂಡಿ ಹಾಕಿ ಆಕ್ರೋಶ ಹೊರಗೆಡವಿದ್ದರು. ಇದೀಗ ಗ್ರಾಮದ 5 ಜನರ ವಿರುದ್ಧ FIR ದಾಖಲಿಸಲಾಗಿದೆ.