ಬೆಳಗಾವಿ: ಗಡಿಯಾಚೆ ಇರುವವರು ನಮ್ಮವರು; ಅಲ್ಲಿನ ಕನ್ನಡ ಶಾಲೆಗಳನ್ನು ಅಲ್ಲಿನ ರಾಜ್ಯ ಸರಕಾರ ಕಡೆಗಣಿಸಿರುವುದರಿಂದ ಮೂಲಸೌಕರ್ಯ ಕಲ್ಪಿಸುವುದು ಸಾಧ್ಯವಾಗಿರುವುದಿಲ್ಲ. ಗಡಿಭಾಗದ ಕನ್ನಡನ್ಶಾಲೆಗಳ ಅಭಿವೃದ್ದಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಇದೇ ವರ್ಷ 100 ಕೋಟಿ ರೂ.ಗಳನ್ನು ವೆಚ್ಚ ಮಾಡಿ ಕನ್ನಡದ ಶಾಲೆಗಳ ಅಭಿವೃದ್ಧಿ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ನಗರದಲ್ಲಿ ಇಂದು ಕಾರ್ಯಕ್ರಮವೊಂದರಲ್ಲಿ ಮಾತನಾಡಿದಂತ ಅವರು, ಕನ್ನಡಿಗರ ಅಭಿವೃದ್ಧಿ ಹಾಗೂ ರಕ್ಷಣೆ ಸರಕಾರದ ಜವಾಬ್ದಾರಿಯಾಗಿದೆ. ಕನ್ನಡಿಗರು ವಿಶ್ವದ ಯಾವುದೇ ಮೂಲೆಯಲ್ಲಿರಲಿ ಅಥವಾ ದೇಶದ ಯಾವುದೇ ರಾಜ್ಯದಲ್ಲಿರಲಿ ಅವರ ಅಭಿವೃದ್ಧಿಗೆ ಬದ್ಧವಾಗಿದ್ದು, ಈ ರಾಜ್ಯದ ನಾಡು-ನುಡಿ ಅಭಿವೃದ್ಧಿಪಡಿಸುವುದು ಸರಕಾರದ ಸಂಕಲ್ಪವಾಗಿದೆ ಎಂದು ಹೇಳಿದರು.
ನಮ್ಮ ಸರಕಾರ ಸಮಗ್ರ ಕರ್ನಾಟಕದ ಚಿಂತನೆ ಮಾಡಿ ಹತ್ತು ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕದ ನಡುಭಾಗದಿಂದ ಹಿಡಿದು ಗಡಿಭಾಗದವರೆಗೆ ಅಭಿವೃದ್ಧಿಯನ್ನು ತಲುಪಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ. ಕಲ್ಯಾಣ ಕರ್ನಾಟಕದ ಬೀದರ್ , ಕಲಬುರಗಿ, ಯಾದಗಿರಿ,ಬೆಳಗಾವಿ ಹಾಗೂ ಬಿಜಾಪುರ ಜಿಲ್ಲೆಗಳ ಗಡಿ ಭಾಗದ ಗ್ರಾಮಗಳಲ್ಲಿ 2 ನೂತನ ಕಾರ್ಯಕ್ರಮ ರೂಪಿಸಿದೆ ಎಂದರು.
ಗಡಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರ, ತಮಿಳುನಾಡು, ಕೇರಳ ಗೋವಾ ಹಾಗೂ ತೆಲಂಗಾಣ ರಾಜ್ಯದ ಗಡಿಭಾಗದಲ್ಲಿರುವ ರಾಜ್ಯದ ಜಿಲ್ಲೆಗಳಲ್ಲಿ 1800 ಗ್ರಾಮ ಪಂಚಾಯತಿಗಳನ್ನು ಸಂಪೂರ್ಣವಾಗಿ ಅಭಿವೃದ್ಧಿ ಮಾಡುವ ಕಾರ್ಯಕ್ರಮ ಗಳನ್ನು ಈ ವರ್ಷದಲ್ಲಿ ಅನುಷ್ಠಾನ ಮಾಡಲಾಗುತ್ತಿದೆ. ಗಡಿ ಭಾಗದ ಸಮಗ್ರ ರಸ್ತೆಗಳ ಸುಧಾರಣೆಗೆ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ. ಗಡಿ ಭಾಗದ ಗ್ರಾಮಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ರೂಪಿಸಿರುವ ಜಲ್ ಜೀವನ್ ಮಿಷನ್ ಯೋಜನೆಯಡಿ ಈ ವರ್ಷ ಗಡಿ ಭಾಗದ ಎಲ್ಲಾ ಗ್ರಾಮಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಿದೆ ಎಂದು ತಿಳಿಸಿದರು.