ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿಯಿಂದಾಗಿ ಅಪಘಾತವಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದು ಯಾವ ಕಾರಣಕ್ಕಾಗಿ ಅಪಘಾತವಾಗಿದೆ ಎಂದು ಪ್ರಾಥಮಿಕ ತನಿಖೆ ಕೈಗೊಳ್ಳಲು ಪೊಲೀಸರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ವರದಿ ಬಂದ ನಂತರ ತಪ್ಪಿತಸ್ಥರನ್ನು ಶಿಕ್ಷಿಸಲಾಗುವುದು. ಬಿಬಿಎಂಪಿ ಆಯುಕ್ತರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ರಸ್ತೆ ಸರಿಪಡಿಸಲು ಸೂಚನೆ ನೀಡಲಾಗಿದೆ. ರಸ್ತೆ ಗುಂಡಿಗಳನ್ನು ಅಡ್ಡಾದಿಡ್ಡಿಯಾಗಿ ಮುಚ್ಚಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಮಟ್ಟ ಮಾಡಲು ಸೂಚಿಸಲಾಗುವುದು ಎಂದರು.
ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳು ಒಕ್ಕಲಿಗ ಸಮುದಾಯಕ್ಕೆ ಶೇ 12 ರಷ್ಟು ಮೀಸಲಾತಿ ನೀಡಬೇಕು ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಇದಕ್ಕೆ ಈಗಾಗಲೇ ಅಧಿವೇಶನದಲ್ಲಿ ಉತ್ತರ ನೀಡಲಾಗಿದೆ. ಎಲ್ಲಾ ಸಮುದಾಯಗಳಿಗೆ ಆಕಾಂಕ್ಷೆ ಹೆಚ್ಚಾಗಿದ್ದು ಮೀಸಲಾತಿ ಕೇಳುವುದರಲ್ಲಿ ತಪ್ಪಿಲ್ಲ. ಆದರೆ , ಕಾನೂನಿನ ಚೌಕಟ್ಟಿನಲ್ಲಿ ಮಾಡಬೇಕು. ಹಿಂದುಳಿದ ವರ್ಗಗಳ ಆಯೋಗದ ವರದಿಗಳ ಆಧಾರದ ಮೇಲೆ ನಿರ್ಧಾರ ಕೈಗೊಳ್ಳಬೇಕು ಎಂದರು.
ಈ ವಾರ ದೆಹಲಿ ಭೇಟಿ
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಸಂಪುಟ ವಿಸ್ತರಣೆ ಯಾಗುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಾರ ದೆಹಲಿ ಭೇಟಿಗೆ ಸಮಯ ನೀಡಲು ಕೋರಿದ್ದು, ಸಮಯ ನಿಗದಿಯಾದ ಕೂಡಲೇ ದೆಹಲಿಗೆ ಭೇಟಿ ನೀಡುವುದಾಗಿ ತಿಳಿಸಿದರು .
ಶಾಸಕ ರಮೇಶ್ ಜಾರಕಿಹೊಳಿ ತಮ್ಮ ಕ್ಷೇತ್ರದ ಆರ್.ಡಿ.ಪಿ.ಆರ್ ಹಾಗೂ ಲೋಕೋಪಯೋಗಿ ರಸ್ತೆಗಳ ಬಗ್ಗೆ ಮನವಿ ನೀಡಲು ಬಂದಿದ್ದರು, ಎಂದರು.