ಬೆಂಗಳೂರು : ರಾಜ್ಯ ಸರ್ಕಾರವು ವಾಣಿಜ್ಯ ತೆರಿಗೆ ಇಲಾಖೆಯಿಂದ ಬೀದಿಬದಿ ವ್ಯಾಪಾರಿಗಳು, ಮಧ್ಯಮ, ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ಕೊಡುತ್ತಿದೆ. ಸಿಎಂ ಸಿದ್ದರಾಮಯ್ಯ ವಾಣಿಜ್ಯ ತೆರಿಗೆ ಇಲಾಖೆಯಿಂದ ನೋಟಿಸ್ ಕೊಡಿಸಿ, ವಸೂಲಿಗೆ ಇಳಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.
ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಸಣ್ಣ ವ್ಯಾಪಾರಿಗಳ ಹೋರಾಟಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ.ಮತ್ತೊಂದು ಕಡೆ ಮಾನ್ಯ ಮುಖ್ಯಮಂತ್ರಿಗಳು ಸೇರಿ ಸಚಿವ ಸಂಪುಟದ ಸದಸ್ಯರು ಕೇಂದ್ರ ಸರ್ಕಾರವನ್ನು ದೂರುವ ಕುತಂತ್ರ ಮಾಡುತ್ತಿದ್ದಾರೆ.
ಹಾಲು ಮತ್ತಿತರ ಕೆಲ ವಸ್ತುಗಳು ಜಿಎಸ್‍ಟಿ ವ್ಯಾಪ್ತಿಗೆ ಬರುವುದಿಲ್ಲ, ಅಂಥವರಿಗೂ ನೋಟಿಸ್ ಕೊಟ್ಟಿದ್ದಾರೆ. ಜಿಎಸ್‍ಟಿ ವ್ಯವಸ್ಥೆಯಲ್ಲಿ 3 ಸ್ಲ್ಯಾಬ್‍ಗಳಿವೆ. ಎಲ್ಲರಿಗೂ ವಾಣಿಜ್ಯ ತೆರಿಗೆ ಇಲಾಖೆಯು ಶೇ.18 ರಷ್ಟು ತೆರಿಗೆ ಪಾವತಿಗೆ ನೋಟಿಸ್ ಕೊಡುತ್ತಿದೆ. ಖಜಾನೆ ಖಾಲಿ ಆಗಿದೆ ಎಂಬ ಕಾರಣಕ್ಕೆ ಯಾವುದನ್ನೂ ಪರಿಶೀಲಿಸದೆ, ವಿಮರ್ಶೆ ಮಾಡದೇ ರಾತ್ರೋರಾತ್ರಿ ನೋಟಿಸ್ ಕೊಡುತ್ತಿದ್ದು, ಎಲ್ಲ ವ್ಯಾಪಾರಿಗಳು ಭಯಭೀತರಾಗಿದ್ದಾರೆ. ಇಂಥ ಕೆಲಸಕ್ಕೆ ಕೈ ಹಾಕಿದ ರಾಜ್ಯ ಸರ್ಕಾರವು ತಕ್ಷಣ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕೆಂದು ಒತ್ತಾಯಿಸಿದರು.
ಜಿಎಸ್‍ಟಿ ಸಂಗ್ರಹದ ವಿಷಯದಲ್ಲಿ ಕರ್ನಾಟಕವು ಮೊದಲ ಸ್ಥಾನಕ್ಕೆ ಬರಬೇಕೆಂದು ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಹಿರಂಗವಾಗಿಯೇ ಹೇಳಿದ್ದರು. ಮಹಾರಾಷ್ಟ್ರವನ್ನು ಹಿಂದಿಕ್ಕಿ ಅತಿ ಹೆಚ್ಚು ಜಿಎಸ್‍ಟಿ ಸಂಗ್ರಹ ಮಾಡಬೇಕೆಂದು ಮುಖ್ಯಮಂತ್ರಿಗಳು ಬಹಿರಂಗವಾಗಿ ಹೇಳಿದ್ದರು. ಅಧಿಕಾರಿಗಳಿಗೆ ಮೊತ್ತದ ಗುರಿಯನ್ನೂ ನೀಡಿದ್ದರು ಎಂದು ತಿಳಿಸಿದರು.
ಇದೀಗ ಸತ್ಯ ಗೊತ್ತಾಗುತ್ತಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರದ ಖಜಾನೆ ಖಾಲಿ ಆಗಿರುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ವಾಣಿಜ್ಯ ತೆರಿಗೆ ಇಲಾಖೆಯಿಂದ ನೋಟಿಸ್ ಕೊಡಿಸಿ ರಾಜ್ಯ ಸರ್ಕಾರವೇ ವಸೂಲಿಗೆ ಇಳಿದಿದೆ. ಬೀದಿಬದಿ ವ್ಯಾಪಾರಿಗಳು, ಮಧ್ಯಮ, ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರಿಗಳಿಗೆ ನೀಡಿರುವ ನೋಟಿಸ್ ಸಂಪೂರ್ಣವಾಗಿ ಅಕ್ರಮವಾಗಿದೆ. ತಕ್ಷಣ ನೋಟಿಸ್ ಕೊಡುವುದನ್ನು ಸ್ಥಗಿತಗೊಳಿಸಬೇಕು. ಈಗಾಗಲೇ ಕೊಟ್ಟಿರುವ ನೋಟಿಸನ್ನು ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿದರು.