ಬೆಂಗಳೂರು: ರಾಜ್ಯದಲ್ಲಿ ನೀರಿನಿಂದ ಹರಡುವ ರೋಗಗಳು ಮತ್ತು ಕಾಲರಾ ಹರಡುವುದನ್ನು ತಡೆಯಲು ಪ್ರತಿದಿನ ನೀರಿನ ಪರೀಕ್ಷೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದ್ದಾರೆ.
ತಮ್ಮ ತವರು ಜಿಲ್ಲೆ ಮೈಸೂರಿನಲ್ಲಿ ಕಲುಷಿತ ನೀರು ಸೇವಿಸಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮತ್ತು ವರುಣಾ ಕ್ಷೇತ್ರ ಮತ್ತು ಚಾಮುಂಡೇಶ್ವರಿ ಕ್ಷೇತ್ರದ ಎರಡು ಗ್ರಾಮಗಳಲ್ಲಿ ಕಾಲರಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈ ಸೂಚನೆ ನೀಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾತನಾಡಿದ ಸಿದ್ದರಾಮಯ್ಯ, ಜನರಿಗೆ ಸುರಕ್ಷಿತ ಕುಡಿಯುವ ನೀರು ಒದಗಿಸುವುದು ಜಿಲ್ಲಾಡಳಿತದ ಜವಾಬ್ದಾರಿಯಾಗಿದೆ.
ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಜಿಲ್ಲಾಧಿಕಾರಿಗಳು ಪ್ರತಿದಿನ ನೀರಿನ ಪರೀಕ್ಷೆ ನಡೆಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ಹೇಳಿದರು.
“ಒಂದು ಹಳ್ಳಿ ಅಥವಾ ಹಾಡಿಯ ಗಾತ್ರವನ್ನು ಲೆಕ್ಕಿಸದೆ, ರಾಜ್ಯದಾದ್ಯಂತ ಜನರ ಬಳಕೆಗೆ ಪೂರೈಸುವ ಮೊದಲು ಪ್ರತಿದಿನ ಕುಡಿಯುವ ನೀರಿನ ಗುಣಮಟ್ಟವನ್ನು ಪರಿಶೀಲಿಸಬೇಕು. ಜಿಲ್ಲಾಡಳಿತಗಳು ಇದನ್ನು ನಿಯಮಿತವಾಗಿ ಮೇಲ್ವಿಚಾರಣೆ ಮಾಡಬೇಕು.’ ಎಂದು ಅವರು ಹೇಳಿದರು