ಬೆಂಗಳೂರು: ರಾಜ್ಯದ ಪ್ರತಿ ಗ್ರಾಮ ಮತ್ತು ವಾರ್ಡ್‍ಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಬಾರದು. ಸಮಸ್ಯೆ ಉದ್ಭವಿಸಿದಲ್ಲಿ 24 ಗಂಟೆಗಳೊಳಗಾಗಿ ಟ್ಯಾಂಕರ್, ಖಾಸಗಿ ಕೊಳವೆಬಾವಿ ಸೇರಿದಂತೆ ಯಾವುದೇ ಜಲಮೂಲಗಳಿಂದ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಅವರು ಮಂಗಳವಾರಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ವಹಣೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.
ಹಿಂಗಾರು ಹಾಗೂ ಮುಂಗಾರು ಮಳೆ ಕೊರತೆಯಿಂದಾಗಿ ಭಾರಿ ಪ್ರಮಾಣದ ಬರಗಾಲ ಉಂಟಾಗಿದೆ. ಸುಮಾರು 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. ಏಪ್ರೀಲ್ ಮತ್ತು ಮೇ ತಿಂಗಳಲ್ಲಿ ಬರುವ ತೀವ್ರ ಬರಗಾಲವನ್ನು ಎದುರಿಸಲು ಸಜ್ಜಾಗಬೇಕಿದೆ ಎಂದು ತಿಳಿಸಿದರು.
ಪ್ರಸ್ತುತದಲ್ಲಿ ಇರುವ ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕು ಮತ್ತು ಮುಂಬರುವ ಸಮಸ್ಯೆಗಳನ್ನು ಹೇಗೆ ಎದುರಿಸಬೇಕು ಎಂಬುದಕ್ಕೆ ಸೂಕ್ತ ಯೋಜನೆ ರೂಪಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಮಾಧ್ಯಮಗಳಲ್ಲಿ ಪ್ರಕಟವಾಗುವ ಜನರ ಸಮಸ್ಯೆಗಳ ಕುರಿತ ವರದಿಗಳನ್ನು ಪರಿಶೀಲಿಸಿ, ಅವುಗಳಿಗೆ ತಕ್ಷಣವೇ ಸ್ಪಂದಿಸಬೇಕು ಎಂದು ಸೂಚಿಸಿದರು.
ಬರಗಾಲದಿಂದ ಜನರು ಗುಳೆ ಹೋಗುವುದನ್ನು ತಪ್ಪಿಸಬೇಕು. ಈ ಕುರಿತು ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲ್ಲೂಕು, ಗ್ರಾಪಂ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕಾರ್ಯಪ್ರವೃತ್ತರಾಗಬೇಕು ಎಂದು ಮುಖ್ಯಮಂತ್ರಿಗಳು ಹೇಳಿದರು.
ಶೀಘ್ರದಲ್ಲೇ ಚುನಾವಣಾ ನೀತಿಸಂಹಿತೆ ಜಾರಿಯಾಗಲಿರುವುದರಿಂದ ಚುನಾವಣಾ ಕೆಲಸದ ಜೊತೆಗೆ ಬರ ನಿರ್ವಹಣೆಯನ್ನು ನಿರ್ಲಕ್ಷಿಸಬಾರದು. ಬರನಿರ್ವಹಣೆಗೆ ನೀತಿಸಂಹಿತೆಯು ಅಡ್ಡಿಯಾಗುವುದಿಲ್ಲ ಎಂದು ತಿಳಿಸಿದರು.
*ಕುಡಿಯುವ ನೀರಿನ ಪೂರೈಕೆ ಸಮರ್ಪಕವಾಗಿರಲಿ:* ಜಾನುವಾರುಗಳಿಗೆ ಮೇವಿನ ಕೊರತೆಯಾಗಬಾರದು. ಅಗತ್ಯ ಮೇವಿನ ದಾಸ್ತಾನು ಇಟ್ಟುಕೊಳ್ಳಬೇಕು. ಮೇವು ಅಂತರ್ ಜಿಲ್ಲಾ ಸಾಗಾಣಿಕೆ ಕುರಿತು ನಿಗಾವಹಿಸಬೇಕು ಎಂದು ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಈಗಾಗಲೇ ಜಿಲ್ಲೆಯ ರೈತರಿಗೆ ಮೊದಲ ಹಂತದ ಬರ ಪರಿಹಾರ ಹಣ ಜಮೆಯಾಗಿದ್ದು, ಬರ ಪರಿಹಾರ ಪಡೆಯದ ಅರ್ಹ ರೈತರನ್ನು ಗುರುತಿಸಿ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿಕೊಳ್ಳುವಂತೆ ಕ್ರಮವಹಿಸಬೇಕು ಎಂದು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.