ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ದಾಖಲೆಯ 17ನೇ ಬಜೆಟ್ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿಕೋನ, ಸಾಮಾಜಿಕ ನ್ಯಾಯ ಮತ್ತು ಪ್ರಾದೇಶಿಕ ಅಸಮತೋಲನ ನಿವಾರಣೆಯ ಸಮಗ್ರ ದೃಷ್ಟಿಕೋನವನ್ನು ಪ್ರತಿಫಲಿಸುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ಕಾಂಗ್ರೆಸ್ ಸರಕಾರದ ಜನಪರ ಆಡಳಿತಕ್ಕೆ ಈ ಬಜೆಟ್ ಉಜ್ವಲ ಸಾಕ್ಷಿಯಾಗಿದೆ ಎಂದು ಬಣ್ಣಿಸಿದ್ದಾರೆ.
ಸಿದ್ದರಾಮಯ್ಯ ಅವರು ಬಜೆಟ್ ಗಾತ್ರವನ್ನು 4.48 ಲಕ್ಷ ಕೋಟಿ ರೂಪಾಯಿಗಳಿಗೆ ಏರಿಸಿರುವುದು ರಚನಾತ್ಮಕ ಕ್ರಮವಾಗಿದೆ. ಇದಕ್ಕೆ ತಕ್ಕಂತೆ ಬಂಡವಾಳ ವೆಚ್ಚವನ್ನೂ ಅವರು ಘೋಷಿಸಿದ್ದಾರೆ. ಇವೆಲ್ಲವೂ ಅಭಿವೃದ್ಧಿ ಕಾರ್ಯಗಳಿಗೆ ವೇಗವನ್ನು ತಂದುಕೊಡಲಿದ್ದು, ಅಪಾರ ಸಂಖ್ಯೆಯಲ್ಲಿ ಉದ್ಯೋಗಗಳನ್ನು ಸೃಷ್ಟಿಸಲಿವೆ ಎಂದು ಅವರು ಪ್ರತಿಪಾದಿಸಿದ್ದಾರೆ.
ರೈತ ಕಲ್ಯಾಣ, ಕೈಗಾರಿಕಾ ಪ್ರಗತಿ, ಪ್ರವಾಸೋದ್ಯಮ, ನೀರಾವರಿ, ತೋಟಗಾರಿಕೆ, ಹೈನುಗಾರಿಕೆ, ಮೀನುಗಾರಿಕೆ, ಪ್ರಾಥಮಿಕ ಮತ್ತು ಉನ್ನತ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ಬಜೆಟ್ ಸಾಕಷ್ಟು ಆದ್ಯತೆ ನೀಡಿದೆ. ಇದು ಸುಸ್ಥಿರ ಬೆಳವಣಿಗೆಗೆ ದಾರಿ ಮಾಡಿಕೊಡಲಿದೆ ಎಂದು ಪಾಟೀಲ ನುಡಿದಿದ್ದಾರೆ.
ಕೃಷ್ಣಾ ಮೇಲ್ದಂಡೆ ಯೋಜನೆಗೆ ಅಗತ್ಯವಾದ ಭೂಸ್ವಾಧೀನಕ್ಕೆ ಮುಖ್ಯಮಂತ್ರಿಗಳು ಪ್ರತಿ ಎಕರೆ ಖುಷ್ಕಿ ಜಮೀನಿಗೆ 30 ಲಕ್ಷ ರೂ ಮತ್ತು ತರಿ ಜಮೀನಿಗೆ 40 ಲಕ್ಷ ರೂ. ನಿಗದಿ ಪಡಿಸಿರುವುದು ರೈತರಿಗೆ ಸಂದ ಜಯವಾಗಿದೆ. ಹಾಗೆಯೇ ವಿಜಯಪುರ ಜಿಲ್ಲೆಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯತ್ತ ಒಂದು ಹೆಜ್ಜೆ ಮುಂದಿಟ್ಟಿರುವುದು ಸ್ವಾಗತಾರ್ಹವಾಗಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.
ಜಿಟಿಟಿಸಿ ಕೇಂದ್ರಗಳ ಮತ್ತು ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ ಕೈಗಾರಿಕಾ ಬೆಳವಣಿಗೆಗೆ ಪೂರಕವಾಗಿದೆ. ಇದರಿಂದ ಗುಣಮಟ್ಟದ ಮಾನವ ಸಂಪನ್ಮೂಲ ಸೃಷ್ಟಿ ಸಾಧ್ಯವಾಗಲಿದೆ ಎಂದು ಪಾಟೀಲ ಭರವಸೆ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಬಜೆಟ್ 2026-27: ʻಮುಖ್ಯಮಂತ್ರಿ ಸೌರ ಕೃಷಿ ಯೋಜನೆʼಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಶ್ಲಾಘನೆ








