ಬೆಂಗಳೂರು: ಪಿ.ಎಸ್ ಐ. ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ. ವೀರಪ್ಪ ಅವರು ತಮ್ಮ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ನಸೀರ್ ಅಹಮದ್ ಅವರುಗಳು ಉಪಸ್ಥಿತರಿದ್ದರು.
ಪಿಎಸ್ಐ ಪರೀಕ್ಷಾ ನೇಮಕಾತಿಯಲ್ಲಿ ನಡೆದಿರುವ ಅಕ್ರಮಗಳ ಕುರಿತಂತೆ ಕೂಲಂಕಶವಾಗಿ ತನಿಖೆ ನಡೆಸಿ ವರದಿ ನೀಡುವಂತೆ ರಾಜ್ಯ ಸರ್ಕಾರವು ನಿವೃತ್ತ ನ್ಯಾಯಮೂರ್ತಿ ಬಿ ವೀರಪ್ಪ ನೇತೃತ್ವದ ಏಕಸದಸ್ಯ ಆಯೋಗ ರಚಿಸಿತ್ತು. ಕಳೆದ ವರ್ಶದ ಜುಲೈ 21 ರಂದು ಅಕ್ರಮ ನಡೆದಿರುವ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ನ್ಯಾಯಾಂಗ ತನಿಖೆಗೆ ಆದೇಶ ನೀಡಿತ್ತು.ಕಳೆದ ಬಿಜೆಪಿ ಸರ್ಕಾರದಲ್ಲಿ ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮ ಭಾರಿ ಸದ್ದು ಮಾಡಿತ್ತು. ಕಾಂಗ್ರೆಸ್ ಇದೇ ವಿಚಾರವಾಗಿ ಬಿಜೆಪಿ ಸರ್ಕಾರ ಹಾಗೂ ಅಂದಿನ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಹೋರಾಟವನ್ನೇ ನಡೆಸಿತ್ತು. ಈ ಅಕ್ರಮವನ್ನು ತನಿಖೆ ನಡೆಸುವುದಾಗಿ ಕಾಂಗ್ರೆಸ್ ಹೇಳಿತ್ತು. ಇದೀಗ ಅಧಿಕಾರಕ್ಕೆ ಬಂದ ತಕ್ಷಣ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಕ್ರಮವನ್ನು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಒಪ್ಪಿಸಿತ್ತು.