ಬೆಂಗಳೂರು: ರಾಮಲಲ್ಲಾ ಪ್ರತಿಷ್ಠಾಪನೆಗೆ ಆಮಂತ್ರಣ ನೀಡಿದರೂ ಹೋಗುವುದಿಲ್ಲ ಎಂಬ ತೀರ್ಮಾನ ಮಾಡುವ ಮೂಲಕ ಕಾಂಗ್ರೆಸ್ ಪಕ್ಷವು ಕೋಟ್ಯಂತರ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಸುದ್ದಿಗಾರರ ಜತೆ ಗುರುವಾರ ಮಾತನಾಡಿದ ಅವರು, ‘ಇಡೀ ದೇಶವೇ ರಾಮಮಂದಿರ ಉದ್ಘಾಟನೆಯ ಸಂಭ್ರಮದಲ್ಲಿದೆ. ರಾಮರಾಜ್ಯ ಹಾಗೂ ರಾಮನ ಕನಸು ನನಸಾಗಬೇಕಿದೆ. ಅಂತಹ ಸಂದರ್ಭದಲ್ಲಿ ಕಾಂಗ್ರೆಸ್ ಕೈಗೊಂಡ ನಿರ್ಧಾರವನ್ನು ನಾನು ಖಂಡಿಸುತ್ತೇನೆ’ ಎಂದರು.
‘ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಅಂತಹವರು ಸೇರಿ ಒಂದು ಒಳ್ಳೆಯ ಕೆಲಸಕ್ಕೆ ಕಲ್ಲು ಹಾಕುವ ಕೆಲಸ ಮಾಡುತ್ತಿದ್ದಾರೆ. ಮುಂದೆ ಅವರೇ ಪಶ್ಚಾತ್ತಾಪಪಡುತ್ತಾರೆ’ ಎಂದು ಹೇಳಿದರು.
ಇಲ್ಲಿಯವರೆಗೆ ಜಾತ್ಯತೀತತೆಯ ಮುಖವಾಡ ಹಾಕಿದ್ದ ಕಾಂಗ್ರೆಸ್ ಬಣ್ಣ ಬಯಲಾಗಿದೆ. ರಾಮಲಲ್ಲಾ ಪ್ರತಿಷ್ಠಾಪನೆ ಆಹ್ವಾನ ತಿರಸ್ಕರಿಸುವ ಮೂಲಕ ಅದು ಮತೀಯವಾದಿ ಪಕ್ಷ ಎಂಬುದು ಸಾಬೀತಾಗಿದೆ ಎಂದು ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಸುಪ್ರೀಂ ಕೋರ್ಟ್ ತೀರ್ಪಿನ ಅನುಸಾರ ರಾಮಮಂದಿರ ನಿರ್ಮಿಸಲಾಗಿದೆ. ಭಕ್ತಾದಿಗಳೇ ದೇಣಿಗೆಯಿಂದ ಭವ್ಯ ದೇಗುಲ ನಿರ್ಮಾಣವಾಗಿದೆ. ಇಂತಹದೊಂದು ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗವಹಿಸುವುದನ್ನು ಬಿಟ್ಟು ಆಹ್ವಾನ ತಿರಸ್ಕರಿಸುವುದಾಗಿ ಕಾಂಗ್ರೆಸ್ ಹೇಳಿದೆ. ಇದರ ಮುಂದಿನ ಫಲವನ್ನು ಲೋಕಸಭಾ ಚುನಾವಣೆಯಲ್ಲಿ ಆ ಪಕ್ಷ ಅನುಭವಿಸಲಿದೆ ಎಂದರು.