ಶಿವಮೊಗ್ಗ: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದ್ದಂತೆ ರಾಜಕೀಯ ಪಕ್ಷಗಳು ಸಮಾವೇಶಗಳನ್ನು ಮಾಡಿ ಜನರ ಮನ ಮುಟ್ಟುತ್ತಿದ್ದಾರೆ. ಜಿಲ್ಲೆಯಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ವಿಚಾರವೇ ಚುನಾವಣಾ ಅಸ್ತ್ರವಾಗಿದೆ.
ಸಂತ್ರಸ್ತರ ಸಮಸ್ಯೆ ಮುಂದಿಟ್ಟು ರಾಜಕೀಯ ಲಾಭ ಮಾಡಿಕೊಳ್ಳಲು ರಾಜಕೀಯ ಪಕ್ಷಗಳು ಮುಂದಾಗಿವೆ. ಶರಾವತಿ ಸಂತ್ರಸ್ತರ ಸಮಸ್ಯೆ ಮುಂದಿಟ್ಟುಕೊಂಡು ಬಿಜೆಪಿ ವಿರುದ್ಧ ಇಂದು ಕಾಂಗ್ರೆಸ್ ಹೋರಾಟಕ್ಕೆ ಇಳಿದಿದೆ.ರಾಜ್ಯ ಸರ್ಕಾರ, ಶರಾವತಿ ಸಂತ್ರಸ್ತರಿಗೆ ನೀಡಿದ ಹಕ್ಕುಪತ್ರ ವಜಾ ಮಾಡಿದೆ. ಇದೇ ವಿಷಯಕ್ಕೆ ಬಿಜೆಪಿ ಸರ್ಕಾರದ ವಿರುದ್ಧ ಇಂದು ಹೋರಾಟ ನಡೆಸಲು ಕಾಂಗ್ರೆಸ್ ಮುಂದಾಗಿದೆ. ಶಿವಮೊಗ್ಗದ ಆಯನೂರಿನಿಂದ ಶಿವಮೊಗ್ಗದವರೆಗೆ 20 ಕಿ.ಮೀ ಪಾದಯಾತ್ರೆ ನಡೆಸಲು ಕಾಂಗ್ರೆಸ್ ಯೋಜನೆ ರೂಪಿಸಿದೆ.
ಮಾಜಿ ಶಾಸಕ ಹಾಗೂ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ನೇತೃತ್ವದಲ್ಲಿ ಪಾದಯಾತ್ರೆ ನಡೆಯಲಿದೆ. ಇಂದು ಬೆಳಿಗ್ಗೆ 11 ಗಂಟೆಗೆ ಆಯನೂರಿನಿಂದ ಪಾದಯಾತ್ರೆ ಆರಂಭವಾಗಲಿದೆ. ಸಂಜೆ 4 ಗಂಟೆಗೆ ಶಿವಮೊಗ್ಗದ ಎನ್ಇಎಸ್ ಮೈದಾನದಲ್ಲಿ ಸಂತ್ರಸ್ತರ ಸಮಾವೇಶ ಆಯೋಜಿಸಲಾಗಿದ್ದು ಸಮಾವೇಶದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಬಿಕೆ ಹರಿಪ್ರಸಾದ್, ಧ್ರವ್ ನಾರಾಯಣ್ ಸೇರಿದಂತೆ ರಾಜ್ಯದ ಬಹುತೇಕ ಕೈ ನಾಯಕರು ಭಾಗಿಯಾಗಲಿದ್ದಾರೆ.