ಬೆಂಗಳೂರು : ಕೋಟ್ಯಾಂತರ ಭಾರತೀಯರ ಕನಸು ನಿನ್ನೆ ನನಸಾಗಿದೆ. ಎಷ್ಟು ವರ್ಷಗಳಿಂದ ಕಾಯುತ್ತಿದ್ದ ರಾಮನ ಭಕ್ತರ ಕನಸು ನಿಜವಾಗಿದೆ. ಅತ್ಯಂತ ಯಶಸ್ವಿಯಾಗಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಕೂಡ ಮುಗಿದಿದೆ ಆದರೆ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ರಾಮನ ವಿಚಾರವಾಗಿ ರಾಜಕೀಯ ಕೆಸರೆರ ಚಾಟ ಮುಂದುವರೆದಿದೆ
ಅದರ ಭಾಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಮಹಾತ್ಮ ಗಾಂಧೀಜಿ ಹೇಳಿದ ರಾಮನನ್ನು ಪೂಜಿಸುತ್ತದೆ ಹೊರತು ಬಿಜೆಪಿ ಹೇಳಿದ ರಾಮನನ್ನು ಅಲ್ಲ ಎನ್ನುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಾವು ಮಹಾತ್ಮಾ ಗಾಂಧಿಯವರು ಹೇಳಿದ ರಾಮನ ಭಕ್ತರು. ಮಹಾತ್ಮಾ ಗಾಂಧೀಜಿಯವರು ರಘುಪತಿ ರಾಘವ ರಾಜಾರಾಮ್ ಎಂದು ಭಜಿಸುತ್ತಿದ್ದು, ಅವರು ಸಾಯುವಾಗಲೂ ಹೇ ರಾಮ್ ಎಂದೇ ಜೀವ ಬಿಟ್ಟರು. ಬಿಜೆಪಿ ರಾಮನ ಹೆಸರಲ್ಲಿ ರಾಜಕೀಯ ಮಾಡುತ್ತಿದೆ. ಕಾಂಗ್ರೆಸ್ ಮಹಾತ್ಮಾಗಾಂಧಿ ಹೇಳಿದ ರಾಮಾಯಣದ ರಾಮನನ್ನು ಪೂಜಿಸುತ್ತದೆ. ಬಿಜೆಪಿ ಹೇಳಿದ ರಾಮನನ್ನು ಅಲ್ಲ ಎಂದು ಬರೆದುಕೊಂಡಿದ್ದಾರೆ.
ಮುಂದುವರೆದು ನನಗೆ ತಿಳಿದಿರುವ ರಾಮ, ನಾನು ಪೂಜಿಸುವ ರಾಮ ವಚನ ಪರಿಪಾಲನೆಯನ್ನೇ ತನ್ನ ಉಸಿರಾಗಿಸಿಕೊಂಡವನು. ನನಗೆ ತಿಳಿದಿರುವ ಹನುಮ, ನಾನು ಪೂಜಿಸುವ ಹನುಮ ರಾಮನಾಮಕ್ಕಿಂತ ಮಿಗಿಲಿಲ್ಲ, ರಾಮನೇ ಜಗವೆಲ್ಲಾ ಎಂದು ತಿಳಿದು ರಾಮಭಕ್ತಿಯನ್ನೇ ಎದೆಯೊಳಗೆ ಇಳಿಸಿಕೊಂಡವನು. ಹನುಮನ ನಾಡಿನವರಾದ ನಮಗೆ ರಾಮನ ಬಗ್ಗೆ, ರಾಮಭಕ್ತಿಯ ಬಗ್ಗೆ ಹೇಳಿಕೊಡುವ ಅಗತ್ಯವಿಲ್ಲ. ಅದೊಂದು ತೋರ್ಪಡಿಕೆಯ ವಿದ್ಯಮಾನವೂ ಅಲ್ಲ. ರಾಮಭಕ್ತಿ ನಿರಂತರ. ವೈಯಕ್ತಿಕವಾಗಿ ನಾನು, ರಾಮನಿಂದ ವಚನ ಪರಿಪಾಲನೆಯನ್ನು, ಭೀಮನಿಂದ (ಡಾ. ಅಂಬೇಡ್ಕರ್) ಸಮತೆ ಅನುಷ್ಠಾನವನ್ನು, ಬಸವನಿಂದ ನುಡಿ, ನಡೆಯ ನಡುವೆ ಅಂತರವಿಲ್ಲದೆ ಬದುಕುವುದನ್ನು ನನ್ನಲ್ಲಿ ಅಳವಡಿಸಿಕೊಳ್ಳುತ್ತಲೇ ಮುಂದುವರಿದಿದ್ದೇನೆ.
ಹನುಮನ ನಾಡಿನವರಾದ ನಾವು ಹನುಮನ ಎದೆಗಿಂತ ಮಿಗಿಲಾದ ಗುಡಿ ರಾಮನಿಗೆ ಬೇರಾವುದೂ ಇಲ್ಲ ಎಂದು ತಿಳಿದೇ ಆ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಲಿಲ್ಲ. ಬದಲಿಗೆ ಊರೂರಿನಲ್ಲಿಯೂ ಹನುಮನಿಗೆ ಗುಡಿ ಕಟ್ಟಿದೆವು. ರಾಮನಿಗೆ ಹನುಮನ ಎದೆಗಿಂತ ಬೇರಾವುದಾದರೂ ಶ್ರೇಷ್ಠ ಗುಡಿಯನ್ನು ಈ ಜಗತ್ತಿನಲ್ಲಿ ಯಾರಾದರೂ ಕಟ್ಟಲು ಸಾಧ್ಯವೇ? ನಿಜ ರಾಮಭಕ್ತರು ಉತ್ತರ ಹೇಳಬೇಕು. ರಾಮ ತನ್ನ ಭಕ್ತರಲ್ಲಿ ನೋಡುವುದು ಅವರ ಸತ್ಯಸಂಧತೆ, ವಚನ ಪರಿಪಾಲನೆಯನ್ನೇ ಹೊರತು ಢಾಂಭಿಕತೆಯನ್ನಲ್ಲ. ರಾಜಕಾರಣಿಗಳಿಂದ ರಾಮ ನಿರೀಕ್ಷಿಸುವುದು ಶಾಂತಿ, ನೆಮ್ಮದಿ, ಸಹಬಾಳ್ವೆಯಿಂದ ಕೂಡಿದ ರಾಮರಾಜ್ಯದ ನಿರ್ಮಾಣವನ್ನು ಮಾತ್ರ.
ಪ್ರಧಾನಿ ನರೇಂದ್ರಮೋದಿ ಅವರೇ, ನೀವು ನಿಜವಾದ ರಾಮಭಕ್ತರೇ ಅಗಿದ್ದರೆ ಚುನಾವಣೆಯ ವೇಳೆ ನಿಮ್ಮ ಪ್ರಣಾಳಿಕೆಯ ಮೂಲಕ ಈ ದೇಶದ ಜನತೆಗೆ ನೀಡಿದ್ದ ವಾಗ್ದಾನದಲ್ಲಿ ಎಷ್ಟು ವಾಗ್ದಾನಗಳನ್ನು ಈಡೇರಿಸಿದ್ದೀರಿ? ಎಷ್ಟನ್ನು ಈಡೇರಿಸಬೇಕಿದೆ ಎನ್ನುವುದನ್ನು ಅಯೋಧ್ಯೆಯಲ್ಲಿ ತಾವು ಇಂದು ಉದ್ಘಾಟಿಸುತ್ತಿರುವ ರಾಮಮಂದಿರದಲ್ಲಿ ನಿಂತು ಪ್ರಮಾಣ ಮಾಡಿ ಹೇಳಿ. ನಿಮಗೆ ಆ ಧೈರ್ಯವಿಲ್ಲ, ಅದು ಬರುವುದೂ ಇಲ್ಲ. ಏಕೆಂದರೆ ರಾಮ, ನಿಮಗೆ ಚುನಾವಣಾ ಅಸ್ತ್ರ ಮಾತ್ರ.
ನಿಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ, ರೈತರ ಆದಾಯವನ್ನು ದ್ವಿಗುಣಗೊಳಿಸುವ ಭರವಸೆಯನ್ನು ನೀಡಿದ್ದಿರಿ. ಆದರೆ, ಇದಕ್ಕಾಗಿ ಏನು ಮಾಡಿದಿರಿ? ರೈತರ ಆದಾಯ ದ್ವಿಗುಣಗೊಳಿಸುವುದಿರಲಿ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ಬಿಡಿಗಾಸು ಬರ ಪರಿಹಾರವನ್ನೂ ನೀವು ನೀಡಿಲ್ಲ. ಅದೇ ರೀತಿ, ಒಕ್ಕೂಟ ವ್ಯವಸ್ಥೆಯಲ್ಲಿರುವ ಎಲ್ಲ ರಾಜ್ಯಗಳ ಸಶಕ್ತೀಕರಣಕ್ಕಾಗಿ ಸಹಕಾರಿ ಒಕ್ಕೂಟ ವ್ಯವಸ್ಥೆಯ ನಿರ್ಮಾಣದ ಬಗ್ಗೆ ಭರವಸೆ ನೀಡಿದ್ದಿರಿ. ವಿಪರ್ಯಾಸವೆಂದರೆ, ಇಂದು ರಾಜ್ಯಗಳಿಗೆ ದಕ್ಕಬೇಕಾದ ಅವುಗಳ ನ್ಯಾಯಯುತ ಪಾಲನ್ನು ಕೂಡ ಕಸಿದುಕೊಂಡಿದ್ದೀರಿ. ಇದರೊಟ್ಟಿಗೆ ಕುತಂತ್ರದಿಂದ ಸೆಸ್, ಸರ್ಚಾರ್ಜ್ಗಳನ್ನು ಹೆಚ್ಚಿಸಿದ್ದೀರಿ.
ಪ್ರಧಾನಿ ಮೋದಿ ಅವರೇ, ದೇಶದ ಭದ್ರತೆಯ ಬಗ್ಗೆ ನಿಮ್ಮ ಪ್ರಣಾಳಿಕೆಯಲ್ಲಿ ಪುಂಖಾನುಪುಂಖ ಆಶ್ವಾಸನೆಗಳನ್ನು ಕೊಟ್ಟಿದ್ದಿರಿ. ಆದರೆ, ಗಡಿಯೊಳಗೆ ಅತಿಕ್ರಮಣ ಮಾಡಿ ಅಕ್ರಮ ಸೇನಾ ನಿರ್ಮಾಣ ಚಟುವಟಿಕೆ ಕೈಗೊಂಡಿರುವ ಚೀನಾವನ್ನು ಹಿಂದಕ್ಕೆ ಕಳುಹಿಸಲಾಗದೆ ಚೀನಾ ನಮ್ಮ ಗಡಿಯನ್ನು ಪ್ರವೇಶಿಸಿಯೇ ಇಲ್ಲ ಎನ್ನುವ ಹೇಳಿಕೆ ನೀಡಿಬಿಟ್ಟಿರಿ! ಆ ಮೂಲಕ ಮುಂದಕ್ಕೆ ಇದ್ದ ಗಡಿ ರೇಖೆಯನ್ನು ಹಿಂದಕ್ಕೆ ಎಳೆದ ಶೂರ ನೀವು!
ಯಾವ ಗಡಿ ರೇಖೆಯನ್ನು ಕಾಯುವುದಕ್ಕಾಗಿ ನಮ್ಮ ಪರಾಕ್ರಮಿ ಸೈನಿಕರು ಸಂಘರ್ಷ ನಡೆಸಿ ತಮ್ಮ ಪ್ರಾಣವನ್ನೇ ಸಮರ್ಪಿಸಿದರೋ ಆ ಸೈನಿಕರಿಗೆ ನೀವು ಮರಣೋತ್ತರ ಅವಮಾನ ಮಾಡಿದಿರಿ.ಹೀಗೆ, ವಚನ ಪರಿಪಾಲನೆ ಎಂದರೇನು ಎಂಬುದೇ ತಿಳಿಯದ ನೀವು ಯಾವ ಸೀಮೆಯ ರಾಮಭಕ್ತ? ಮತ್ತೊಮ್ಮೆ ಹೇಳುತ್ತೇನೆ, ಅಧಿಕಾರದಲ್ಲಿರುವವರಿಂದ ರಾಮ ನಿರೀಕ್ಷಿಸುವುದು ಶಾಂತಿ, ನೆಮ್ಮದಿ, ಸಹಬಾಳ್ವೆಯ ರಾಮರಾಜ್ಯದ ನಿರ್ಮಾಣವನ್ನು ಮಾತ್ರ.
ನಾವು ಮಹಾತ್ಮಾ ಗಾಂಧಿಯವರು ಹೇಳಿದ ರಾಮನ ಭಕ್ತರು. ಮಹಾತ್ಮಾ ಗಾಂಧೀಜಿಯವರು ರಘುಪತಿ ರಾಘವ ರಾಜಾರಾಮ್ ಎಂದು ಭಜಿಸುತ್ತಿದ್ದು, ಅವರು ಸಾಯುವಾಗಲೂ ಹೇ ರಾಮ್ ಎಂದೇ ಜೀವ ಬಿಟ್ಟರು. ಬಿಜೆಪಿ ರಾಮನ ಹೆಸರಲ್ಲಿ ರಾಜಕೀಯ ಮಾಡುತ್ತಿದೆ. ಕಾಂಗ್ರೆಸ್ ಮಹಾತ್ಮಾಗಾಂಧಿ ಹೇಳಿದ ರಾಮಾಯಣದ ರಾಮನನ್ನು ಪೂಜಿಸುತ್ತದೆ. ಬಿಜೆಪಿ ಹೇಳಿದ ರಾಮನನ್ನು ಅಲ್ಲ.#RamLalla… pic.twitter.com/gkKDzpzJ5J
— Siddaramaiah (@siddaramaiah) January 22, 2024