ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಸಬ್ ರಿಜಿಸ್ಟ್ರಾರ್ (ಉಪ ನೋಂದಣಾಧಿಕಾರಿ) ಕಚೇರಿಯನ್ನು ಸುಸಜ್ಜಿತವಾಗಿ ನಿರ್ಮಿಸಲು ಅಗತ್ಯ ಅನುದಾನ ಮಂಜೂರು ಮಾಡಿಸಲಾಗುವುದು. ಇದರೊಂದಿಗೆ, ಬಾಡಿಗೆ ಕಟ್ಟಡಗಳಲ್ಲಿ ಚದುರಿಹೋಗಿರುವ ವಿವಿಧ ಸರ್ಕಾರಿ ಕಚೇರಿಗಳನ್ನು ತಾಲ್ಲೂಕು ಕಚೇರಿಯ ‘ಒಂದೇ ಸೂರಿನಡಿ’ ತರಲಾಗುವುದು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಕಚೇರಿ ಆವರಣದಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿ ನಿರ್ಮಾಣಕ್ಕೆ ಉದ್ದೇಶಿಸಿರುವ ಸ್ಥಳ ಪರಿಶೀಲನೆ ನಡೆಸಿದ ನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.
ಹೈಟೆಕ್ ಕಚೇರಿ ನಿರ್ಮಾಣ
ಸಬ್ ರಿಜಿಸ್ಟ್ರಾರ್ ಕಚೇರಿ ನಿರ್ಮಾಣದ ಕುರಿತು ಮಾಹಿತಿ ನೀಡಿದ ಶಾಸಕರು, “ಈ ಹಿಂದೆ ಕಚೇರಿ ನಿರ್ಮಾಣಕ್ಕೆ 4 ಕೋಟಿ ರೂ. ಮೀಸಲಿರಿಸಿದ್ದರೂ ಅದು ಮಂಜೂರಾಗಿರಲಿಲ್ಲ. ಈಗ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರನ್ನು ಭೇಟಿಯಾಗಿ ಮನವಿ ಮಾಡಲಾಗಿದ್ದು, ಅವರು ಹಣ ಮಂಜೂರಾತಿಗೆ ಒಪ್ಪಿಗೆ ನೀಡಿದ್ದಾರೆ. ಶೀಘ್ರದಲ್ಲೇ ಹೈಟೆಕ್ ಮಾದರಿಯ ಕಚೇರಿ ನಿರ್ಮಾಣವಾಗಲಿದೆ,” ಎಂದರು.
ನೂತನವಾಗಿ ಅಭಿವೃದ್ಧಿಗೊಳ್ಳುತ್ತಿರುವ ತಾಲ್ಲೂಕು ಕಚೇರಿ ಸಂಕೀರ್ಣದಲ್ಲಿ ಖಜಾನೆ ಸೇರಿದಂತೆ ಬಾಡಿಗೆ ಕಟ್ಟಡಗಳಲ್ಲಿರುವ ಇತರೆ ಕಚೇರಿಗಳು ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣ
ತಾಲ್ಲೂಕು ಕಚೇರಿಯಲ್ಲಿ 4 ಕೋಟಿ ರೂ. ವೆಚ್ಚದಲ್ಲಿ ಮೂಲಭೂತ ಸೌಲಭ್ಯ, ಆಸನ ವ್ಯವಸ್ಥೆ ಹಾಗೂ ಪಾರ್ಕಿಂಗ್ ಅಭಿವೃದ್ಧಿಪಡಿಸಲಾಗುತ್ತಿದೆ. ಮುಂದಿನ ಒಂದು ತಿಂಗಳೊಳಗೆ ಈ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡು ಸಾರ್ವಜನಿಕರ ಸೇವೆಗೆ ಲಭ್ಯವಾಗಲಿವೆ.
ಭ್ರಷ್ಟಾಚಾರದ ವಿರುದ್ಧ ಕಠಿಣ ಕ್ರಮ
ಸ್ಥಳ ಪರಿಶೀಲನೆ ವೇಳೆ ವಿವಿಧ ಶಾಖೆಗಳಿಗೆ ದಿಢೀರ್ ಭೇಟಿ ನೀಡಿದ ಶಾಸಕರು, ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ಇದೇ ವೇಳೆ ಆಡಳಿತ ವ್ಯವಸ್ಥೆಯನ್ನು ಸರಿದಾರಿಗೆ ತರಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
“ನಕಲಿ ದಾಖಲೆ ಸೃಷ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ನೌಕರರನ್ನು ಅಮಾನತು ಮಾಡಲಾಗಿದೆ. ಸರ್ಕಾರಿ ದಾಖಲೆಗಳ ರಕ್ಷಣೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ,” ಎಂದು ಅವರು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಉಪ ತಹಶೀಲ್ದಾರ್ ತೋಯಜಾಕ್ಷಿ, ಸಬ್ ರಿಜಿಸ್ಟ್ರಾರ್ ಜೀವನ್, ಹರೀಶ್, ಲೋಕೋಪಯೋಗಿ ಇಲಾಖೆಯ ಇಇ ಅನಿಲ್, ಪ್ರಮುಖರಾದ ಸೋಮಶೇಖರ ಲ್ಯಾವಿಗೆರೆ, ಕಲಸೆ ಚಂದ್ರಪ್ಪ, ಗಿರೀಶ್ ಕೋವಿ, ಮಹಾಬಲ ಕೌತಿ, ಮಧುಮಾಲತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
BREAKING: ಈ ಬಾರಿ SSLC ಪರೀಕ್ಷೆಯ ಹಿಂದಿ ವಿಷಯಕ್ಕೆ ಗ್ರೇಡ್ ಬದಲು ಅಂಕ: ಸಚಿವ ಮಧು ಬಂಗಾರಪ್ಪ ಘೋಷಣೆ








