ಬೆಳಗಾವಿ : ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿಗಳ ಪತ್ತೆಗೆ ನಡೆಸುವ ಸರ್ವೇಯಲ್ಲಿ ಸಕಾರಾತ್ಮಕ ವರದಿ ಬಂದರೆ ಸಚಿವರು ಸ್ಪರ್ಧೆ ಮಾಡಬೇಕಾಗುತ್ತದೆ. ಅಷ್ಟೆ ಅಲ್ಲ, ಗೆಲ್ಲುವ ಪ್ರಮಾಣಿಕ ಪ್ರಯತ್ನವನ್ನು ಮಾಡಬೇಕಾಗುತ್ತದೆ. ಒಂದು ವೇಳೆ ಸಚಿವ ಸ್ಥಾನ ಉಳಿಸಿಕೊಳ್ಳಲು ಚುನಾವಣೆಯನ್ನು ಲಘುವಾಗಿ ತೆಗೆದುಕೊಂಡಿದ್ದು ಕಂಡುಬಂದರೆ ಅಂತಹ ಸಚಿವರು ತಲೆದಂಡವನ್ನು ಎದುರಿಸಬೇಕಾಗುತ್ತದೆ. ಹೀಗಂತ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಎಚ್ಚರಿಕೆ ನೀಡಿದ್ದಾರೆ.
ಆದರೆ ಇದಕ್ಕೆ ತದ್ಭವಿರುದ್ಧವಾಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದು, ನನಗೆ ಸ್ಪರ್ಧೆ ಮಾಡುವಂತೆ ಹೈಕಮಾಂಡ್‌ನ ಯಾವ ನಾಯಕರೂ ಸೂಚಿಸಿಲ್ಲ. ಲೋಕಸಭಾ ಚುನಾವಣೆಗೆ ಸಚಿವರು ಸ್ಪರ್ಧಿಸುವುದು ಕಡ್ಡಾಯವಲ್ಲ.ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಕಾಂಗ್ರೆಸ್ ಹೈಕಮಾಂಡ್ ನನಗೇನೂ ಸೂಚನೆ ನೀಡಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.
ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಪ್ರಯತ್ನ ಮಾಡಬೇಕು. ಲೋಕಸಭೆ ಚುನಾವಣೆ ಸಂಬಂಧ ಈಗಾಗಲೇ ದೆಹಲಿ ಹಾಗೂ ಬೆಂಗಳೂರಲ್ಲಿ ಸಭೆ ಆಗಿದೆ ಎಂದ ಅವರು, ಬೆಳಗಾವಿ ಕ್ಷೇತ್ರದಿಂದ 10 ಹಾಗೂ ಚಿಕ್ಕೋಡಿ ಕ್ಷೇತ್ರದಿಂದ 6 ಜನ ಆಕಾಂಕ್ಷಿಗಳು ಟಿಕೆಟ್ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಕೊನೆ ಕ್ಷಣದಲ್ಲಿ ಅಭ್ಯರ್ಥಿ ಯಾರಾಗುತ್ತಾರೆ ಎಂಬುದನ್ನು ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಹೇಳಿದರು.
ರಾಜ್ಯದಲ್ಲಿ 18 ಕ್ಷೇತ್ರಗಳ ಪೈಕಿ ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧ್ಯವಿಲ್ಲ. ಕೆಲ ಕ್ಷೇತ್ರಗಳಲ್ಲಿ ನಮ್ಮ ಪಕ್ಷ ವೀಕ್ ಇದೆ. 28ರ ಪೈಕಿ 20 ಕ್ಷೇತ್ರಗಳಲ್ಲಿ ನಾವು ಪ್ರಬಲರಾಗಿದ್ದೇವೆ. 8 ಕ್ಷೇತ್ರಗಳಲ್ಲಿ ವೀಕ್ ಇದ್ದೇವೆ. ತಮ್ಮ ಅಭ್ಯರ್ಥಿ ಗೆಲುವಿಗೆ ಎಲ್ಲ ಸಚಿವರೂ ಪ್ರಯತ್ನ ಮಾಡುತ್ತಾರೆ. ನಮ್ಮ ಸಚಿವರ ಪ್ರಯತ್ನದ ನಂತರವೂ ಕೆಲವೊಮ್ಮೆ ಫಲ ಸಿಗುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಸಚಿವರ ತಲೆದಂಡವಾಗುತ್ತದೆ ಎಂಬುದು ಶುದ್ಧ ಸುಳ್ಳು. ಈ ರೀತಿ ಹೈಕಮಾಂಡ್ ಯಾರಿಗೂ ಸೂಚಿಸಿಲ್ಲ, ಇದು ಕೇವಲ ಊಹಾಪೋಹವಷ್ಟೇ ಎಂದು ಹೇಳಿದರು.