ನವದೆಹಲಿ: ನೀಟ್-ಯುಜಿ (NEET-UG) ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳು ಮತ್ತು ಪರೀಕ್ಷೆ ರದ್ದತಿಯ ನಿರ್ಧಾರದ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದು ಕೇವಲ ಪರೀಕ್ಷಾ ಅಕ್ರಮವಲ್ಲ, ಬದಲಿಗೆ “ದೇಶದ ಯುವಜನತೆಯ ಭವಿಷ್ಯದ ವಿರುದ್ಧ ಎಸಗಿದ ಘೋರ ಅಪರಾಧ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇಶದ ಪ್ರಮುಖ ಶಿಕ್ಷಣ ಸಂಸ್ಥೆಗಳನ್ನು ಬಿಜೆಪಿ ಮತ್ತು ಆರ್‌ಎಸ್‌ಎಸ್ ತನ್ನ ಹಿಡಿತಕ್ಕೆ ತೆಗೆದುಕೊಳ್ಳಲು ಪ್ರಯತ್ನಿಸುತ್ತಿರುವುದೇ ಇಂತಹ ಸರಣಿ ಪರೀಕ್ಷಾ ಅಕ್ರಮಗಳಿಗೆ ಕಾರಣ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಪರೀಕ್ಷಾ ಪತ್ರಿಕೆ ಸೋರಿಕೆ ತಡೆಗಟ್ಟುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಈ ಅಕ್ರಮಗಳಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳ ಪರಿಶ್ರಮ ನೀರಿನಲ್ಲಿ ಹೋಮ ಮಾಡಿದಂತಾಗಿದೆ ಎಂದು ಅವರು ಕಿಡಿಕಾರಿದ್ದಾರೆ.
“ರಷ್ಯಾ-ಉಕ್ರೇನ್ ಯುದ್ಧವನ್ನೇ ನಿಲ್ಲಿಸಿದೆ ಎಂದು ಹೇಳಿಕೊಳ್ಳುವ ಪ್ರಧಾನಿ ಮೋದಿ, ದೇಶದಲ್ಲಿ ಪೇಪರ್ ಲೀಕ್ ಆಗುವುದನ್ನು ಯಾಕೆ ತಡೆಯಲು ಸಾಧ್ಯವಾಗುತ್ತಿಲ್ಲ?” ಎಂದು ರಾಹುಲ್ ಲೇವಡಿ ಮಾಡಿದ್ದಾರೆ.








