ಬೆಂಗಳೂರು : ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ, ಪರಿಸರಕ್ಕೆ ತೀವ್ರ ಹಾನಿ ಮಾಡುತ್ತಿರುವ ಘಟಕಗಳನ್ನು ಪತ್ತೆ ಮಾಡಿ ಅವುಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಅದರಲ್ಲೂ ಪರಿಸರಕ್ಕೆ ಹಾನಿಯಾಗಲಿದೆ ಹೀಗಾಗಿ ಕೈಗಾರಿಕೆ ಮುಚ್ಚುವಂತೆ ಆದೇಶಿಸಿದ್ದರೂ, ಅದಕ್ಕೆ ಬೆಲೆ ಕೊಡದೆ ಕೈಗಾರಿಕೆ ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.
ನಿಯಮ ಉಲ್ಲಂಘನೆ ಮತ್ತು ಪರಿಸರ ಮಾಲಿನ್ಯಕ್ಕೆ ಕಾರಣವಾಗುವ ಕೈಗಾರಿಕಾ ಘಟಕಗಳನ್ನು ಮುಚ್ಚಲು ಅಂತಿಮ ಆದೇಶ ನೀಡಿದ್ದರೂ, ಅದನ್ನು ಲೆಕ್ಕಿಸದೆ ಕಾರ್ಯನಿರ್ವಹಿಸುವ ಕೈಗಾರಿಕೆಗಳ ಮಾಲೀಕರು ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಅಧಿಕಾರಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ.
ಬೆಂಗಳೂರಿನ ಬೆಳ್ಳಂದೂರು, ವರ್ತೂರು ಕೆರೆಗಳಿಗೆ ಕಲುಷಿತ ನೀರು ಹರಿಸಲಾಗುತ್ತಿದೆ. ಹೀಗಾಗಿ ಕೆರೆ ಭಾಗದಲ್ಲಿ ತ್ಯಾಜ್ಯ ನೀರು ಶುದ್ಧೀಕರಣ ಘಟಕ ಅಳವಡಿಸುವಂತೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಗಡುವು ನೀಡಿತ್ತು. ಆ ಗಡುವು ಈ ವರ್ಷದ ಡಿಸೆಂಬರ್ಗೆ ಅಂತ್ಯವಾಗಲಿದ್ದು, ಸ್ಥಳೀಯ ಸಂಸ್ಥೆಗಳೊಂದಿಗೆ ಸಮಾಲೋಚಿಸಿ ಎಸ್ಟಿಪಿ ನಿರ್ಮಾಣ ಕಾರ್ಯ ಪೂರ್ಣಗೊಳಿಸಬೇಕು ಎಂದು ಹೇಳಿದರು.