ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ದೇವರು ಮತ್ತು ಪ್ರಾರ್ಥನಾ ಸ್ಥಳದ ಹೆಸರಿನಲ್ಲಿ ಮತಯಾಚಿಸುವ ಮೂಲಕ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಆರೋಪದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಆದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದಿಲ್ಲಿ ಉಚ್ಚ ನ್ಯಾಯಾಲಯವು ಎಪ್ರಿಲ್ 28ರಂದು ವಜಾಗೊಳಿಸಿದೆ.
ಉತ್ತರಪ್ರದೇಶದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರಧಾನಿಯನ್ನು ಆರು ವರ್ಷಗಳ ಅವಧಿಗೆ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಅನರ್ಹಗೊಳಿಸಬೇಕೆಂದು ಕೋರಿ ವಕೀಲ ಆನಂದ್ ಎಸ್ ಜೊಂಡಾಲೆ ಅವರು ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಸಚಿನ್ ದತ್ತಾ ಅವರ ಏಕಸದಸ್ಯ ಪೀಠವು, ಅರ್ಜಿದಾರರು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಪೂರ್ವಭಾವಿಯಾಗಿ ಭಾವಿಸಿದ್ದಾರೆ ಎಂದು ಹೇಳಿದರು. ಯಾವುದೇ ದೂರಿನ ಬಗ್ಗೆ ನಿರ್ದಿಷ್ಟ ದೃಷ್ಟಿಕೋನವನ್ನು ತೆಗೆದುಕೊಳ್ಳಲು ಹೈಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ ಎಂದು ಅದು ಹೇಳಿದೆ.