ನವದೆಹಲಿ: ಮುಂಬರುವ 2025 ರ ದೆಹಲಿ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ದೆಹಲಿ ಲೆಫ್ಟಿನೆಂಟ್ ಗವರ್ನರ್ (ಎಲ್ಜಿ) ವಿ.ಕೆ.ಸಕ್ಸೇನಾ ಅವರು ಅಬಕಾರಿ ನೀತಿ ಪ್ರಕರಣದಲ್ಲಿ ಎಎಪಿ ಮುಖ್ಯಸ್ಥ ಮತ್ತು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯಕ್ಕೆ (ಇಡಿ) ಅನುಮತಿ ನೀಡಿದ್ದಾರೆ
ಡಿಸೆಂಬರ್ 5 ರಂದು ಜಾರಿ ನಿರ್ದೇಶನಾಲಯವು ಅರವಿಂದ್ ಕೇಜ್ರಿವಾಲ್ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ಕೋರಿತ್ತು.
ವಿವಾದ ಮತ್ತು ಭ್ರಷ್ಟಾಚಾರದ ಆರೋಪಗಳ ಕೇಂದ್ರಬಿಂದುವಾಗಿರುವ ದೆಹಲಿ ಸರ್ಕಾರದ ಅಬಕಾರಿ ನೀತಿಯ ಬಗ್ಗೆ ತಿಂಗಳುಗಳ ತನಿಖೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
ಏತನ್ಮಧ್ಯೆ, ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಸಲ್ಲಿಸಿದ್ದ ಅರ್ಜಿಗೆ ಉತ್ತರವನ್ನು ಸಲ್ಲಿಸಲು ದೆಹಲಿ ಹೈಕೋರ್ಟ್ ಶುಕ್ರವಾರ ಜಾರಿ ನಿರ್ದೇಶನಾಲಯಕ್ಕೆ (ಇಡಿ) ಹೆಚ್ಚುವರಿ ಸಮಯವನ್ನು ನೀಡಿದೆ. ದೆಹಲಿ ಅಬಕಾರಿ ಮದ್ಯ ನೀತಿ ಪ್ರಕರಣದಲ್ಲಿ ಚಾರ್ಜ್ಶೀಟ್ಗಳನ್ನು ಪರಿಗಣಿಸುವ ವಿಚಾರಣಾ ನ್ಯಾಯಾಲಯದ ನಿರ್ಧಾರವನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ.
ನ್ಯಾಯಮೂರ್ತಿ ಮನೋಜ್ ಕುಮಾರ್ ಓಹ್ರಿ ಅವರ ಪೀಠವು ಫೆಬ್ರವರಿ 5 ರಂದು ಈ ವಿಷಯದ ವಿಚಾರಣೆಯನ್ನು ನಿಗದಿಪಡಿಸಿದೆ.
ಅಬಕಾರಿ ನೀತಿ ಹಗರಣದಲ್ಲಿ ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯದ ಚಾರ್ಜ್ಶೀಟ್ ಅನ್ನು ಪರಿಗಣಿಸುವ ವಿಚಾರಣಾ ನ್ಯಾಯಾಲಯದ ನಿರ್ಧಾರವನ್ನು ಪ್ರಶ್ನಿಸಿ ಆಮ್ ಆದ್ಮಿ ಪಕ್ಷದ ನಾಯಕರಾದ ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಸಲ್ಲಿಸಿದ್ದ ಅರ್ಜಿಗೆ ದೆಹಲಿ ಹೈಕೋರ್ಟ್ ಇತ್ತೀಚೆಗೆ ನೋಟಿಸ್ ನೀಡಿತ್ತು.