ಮಂಡ್ಯ :- ಹಲವು ವರ್ಷಗಳಿಂದ ಮೂಲ ಸೌಕರ್ಯಗಳಿಂದ ವಂಚಿತವಾಗಿರುವ ಗ್ರಾಮಗಳನ್ನು ಪಟ್ಟಿ ಮಾಡಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು.
ಮದ್ದೂರು ತಾಲೂಕಿನ ಚುಂಚಗಹಳ್ಳಿ, ನೀಲಕಂಠನಹಳ್ಳಿ, ಆಲೂರುದೊಡ್ಡಿ, ಆಲೂರು ಹಾಗೂ ಬೂದಗುಪ್ಪೆ ಗ್ರಾಮಗಳಲ್ಲಿ 1 ಕೋಟಿ ರೂ.ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಬುಧವಾರ ಚಾಲನೆ ನೀಡಿ ಮಾತನಾಡಿದರು.
ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಕ್ಷೇತ್ರದ ನೂರಾರು ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಹಿಂದಿನ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಅಭಿವೃದ್ಧಿಯಿಂದ ವಂಚಿತವಾಗಿವೆ. ಹೀಗಾಗಿ ಅಂತಹ ಗ್ರಾಮಗಳಿಗೆ ಮೊದಲು ಅಭಿವೃದ್ಧಿ ಕಾರ್ಯಗಳಿಗೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದರು.
ಈಗಾಗಲೇ ಎರಡುವರೆ ವರ್ಷಗಳಲ್ಲೆ ನಮ್ಮ ಸರ್ಕಾರ ಕ್ಷೇತ್ರದ ಅಭಿವೃದ್ಧಿಗೆ 1800 ಕೋಟಿಗೂ ಹೆಚ್ಚಿನ ಅನುದಾನ ಬಿಡುಗಡೆ ಮಾಡಿ ಕೊಟ್ಟ ಮಾತಿನಂತೆ ನಡೆದುಕೊಂಡಿದೆ. ಕ್ಷೇತ್ರದ ಪ್ರತಿ ಗ್ರಾಮಗಳಲ್ಲೂ ರಸ್ತೆ, ಚರಂಡಿ, ನೀರಾವರಿ, ಶಿಕ್ಷಣ, ಕುಡಿಯುವ ನೀರು, ಕೆರೆ ಹಾಗೂ ನಾಲೆಗಳ ಆಧುನಿಕರಣ ಸೇರಿದಂತೆ ಪ್ರತಿಯೊಂದು ಕ್ಷೇತ್ರಕ್ಕೂ ವಿಶೇಷ ಗಮನ ನೀಡಲಾಗಿದ್ದು, ಅಭಿವೃದ್ಧಿ ಪರ್ವ ಮಾಡುವ ಮೂಲಕ ರಾಜ್ಯಕ್ಕೆ ಮಾದರಿ ಕ್ಷೇತ್ರವನ್ನಾಗಿ ಮಾಡುವುದೇ ನನ್ನ ಗುರಿಯಾಗಿದೆ ಎಂದರು.
ಚುನಾವಣಾ ಪೂರ್ವದಲ್ಲಿ ನೀಡಿದ್ದ ಪಂಚ ಗ್ಯಾರಂಟಿಗಳನ್ನು ಸಮರ್ಪಕವಾಗಿ ಜಾರಿಗೊಳಿಸುವ ಜತೆಗೆ ರಾಜ್ಯದಲ್ಲಿ ಸಮಗ್ರ ಅಭಿವೃದ್ಧಿಯತ್ತ ದಾಪುಗಾಲು ಹಾಕುತ್ತಿರುವುದನ್ನು ರಾಜ್ಯ ಜನರು ಗಮನಿಸಿ ಸರ್ಕಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದು, ಮುಂದೆಯೂ ಸರ್ಕಾರದಿಂದ ವಿಶೇಷ ಅನುದಾನ ತಂದು ಮತ್ತಷ್ಟು ಅಭಿವೃದ್ದಿ ಕಾರ್ಯಗಳನ್ನು ಹಮ್ಮಿಕೊಂಡು ಜನತೆಗೆ ಅನುಕೂಲ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ಇದೇ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಚಲುವರಾಜು, ಮನ್ಮುಲ್ ನಿರ್ದೇಶಕ ಹರೀಶ್ ಬಾಬು, ಡಿಸಿಸಿ ಬ್ಯಾಂಕ್ ನಿರ್ದೆಶಕ ಪಿ.ಸಂದರ್ಶ, ಗ್ರಾಪಂ ಮಾಜಿ ಅಧ್ಯಕ್ಷರಾದ ಉದಯ್, ಸಂದೀಪ್, ಸದಸ್ಯರಾದ ಕಬ್ಬಾರೆ ರಾಘವೇಂದ್ರ, ಬೂದಗುಪ್ಪೆ ಚಲುವರಾಜು, ಮುಖಂಡರಾದ ರೇವಣ್ಣ, ಉಮೇಶ್, ರಾಮಕೃಷ್ಣ, ನಂದೀಶ್, ಪುಟ್ಟಲಿಂಗಯ್ಯ, ಶಂಕರ್, ಮಹದೇವಯ್ಯ, ಸುರೇಶ್, ಮಾದೇಶ್, ಬಿ.ಎಲ್.ಸತೀಶ್, ಜಯರಾಮು, ಸಿದ್ದೇಗೌಡ ಇದ್ದರು.
ವರದಿ : ಗಿರೀಶ್ ರಾಜ್ ಮಂಡ್ಯ








