ಉಡುಪಿ : ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಮೂಲಕ ರಾಜ್ಯದ ಪ್ರತಿ ಕುಟುಂಬಕ್ಕೆ ತಿಂಗಳಿಗೆ 4 ರಿಂದ 5 ಸಾವಿರ ರೂ. ನಮ್ಮ ಸರ್ಕಾರ ನೀಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಉಡುಪಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ಅಭಿವೃದ್ಧಿ ಕಾಮಾಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು,ಬೆಲೆಏರಿಕೆಯಿಂದ ಕಷ್ಟದಲ್ಲಿರುವ ಜನರಿಗೆ ಆರ್ಥಿಕ ಬಲ ನೀಡಲು ಗ್ಯಾರಂಟಿಗಳನ್ನು ನೀಡುವ ಮೂಲಕ ಬಡವರ ಪರ ಕೆಲಸ ಮಾಡುವುದು ನಮ್ಮ ಸರ್ಕಾರದ ಗುರಿ ಎಂದು ತಿಳಿಸಿದರು.
2023 ರ ಜೂನ್ 11 ಕ್ಕೆ ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಉಡುಪಿ ಜಿಲ್ಲೆಯಲ್ಲಿ 87 ಲಕ್ಷ ಮಹಿಳೆಯರು 33 ಕೋಟಿ ರೂ.ಗಳ ವೆಚ್ಚದಲ್ಲಿ ಉಚಿತ ಪ್ರಯಾಣ ಮಾಡಿದ್ದಾರೆ. ಗೃಹಜ್ಯೋತಿ ಯೋಜನೆಯಡಿ 3,11,652 ಜನ ಲಾಭ ಪಡೆಯುತ್ತಿದ್ದು, ಇದಕ್ಕಾಗಿ 114 ಕೋಟಿ ರೂ. ವ್ಯಯಿಸಲಾಗುತ್ತಿದೆ. ಅನ್ನಭಾಗ್ಯ 7,66,000 ಜನರಿಗೆ ಉಚಿತ ಅಕ್ಕಿ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.
ರಾಜ್ಯದ ಬಡವರಿಗೆ ಅಕ್ಕಿ ನೀಡಲು ನಿರಾಕರಿಸಿದ ಕೇಂದ್ರ ಸರ್ಕಾರ ಎಂದಿಗೂ ಸಾಮಾಜಿಕ ನ್ಯಾಯದ ಪರವಾಗಿ ಇಲ್ಲ. ನಮ್ಮ ಸರ್ಕಾರ ಬಡವರ ಪರ ಕೆಲಸ ಮಾಡುತ್ತಿದೆ. ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಮೂಲಕ ರಾಜ್ಯದ ಪ್ರತಿ ಕುಟುಂಬಕ್ಕೆ ತಿಂಗಳಿಗೆ 4 ರಿಂದ 5 ಸಾವಿರ ರೂ. ನಮ್ಮ ಸರ್ಕಾರ ನೀಡುತ್ತಿದೆ ಎಂದು ತಿಳಿಸಿದ್ದಾರೆ.