ಬೆಂಗಳೂರು: ಆಫ್ರಿಕಾ ದೇಶಗಳಲ್ಲಿ ತಲ್ಲಣ ಮೂಡಿಸುತ್ತಿರುವ ಭೀಕರ ಎಬೋಲಾ ವೈರಸ್ ಸೋಂಕು ಕರ್ನಾಟಕಕ್ಕೂ ಹರಡಬಹುದೇ ಎಂಬ ಸಾರ್ವಜನಿಕರ ಆತಂಕಕ್ಕೆ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ತೆರೆ ಎಳೆದಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಭಾರತದಲ್ಲಿ ಎಬೋಲಾ ಸೋಂಕಿನ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ಹೀಗಾಗಿ ಸಾರ್ವಜನಿಕರು ಯಾವುದೇ ರೀತಿಯ ಭಯ ಪಡುವ ಅಗತ್ಯವಿಲ್ಲ. ಆದರೆ ಮುಂಜಾಗ್ರತಾ ಕ್ರಮವಾಗಿ ತೀವ್ರ ಎಚ್ಚರಿಕೆ ವಹಿಸುವುದು ಅತ್ಯಗತ್ಯವಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಕ್ವಾರಂಟೈನ್ ಹಾಗೂ ಕಟ್ಟುನಿಟ್ಟಿನ ತಪಾಸಣೆಗೆ ಸೂಚನೆ ಎಬೋಲಾ ಪೀಡಿತ ದೇಶಗಳಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲು ನಿರ್ಧರಿಸಲಾಗಿದೆ. ಸೋಂಕಿತ ದೇಶಗಳಿಂದ ಬರುವವರನ್ನು ಕಡ್ಡಾಯವಾಗಿ ಕ್ವಾರಂಟೈನ್‌ನಲ್ಲಿ (ಪ್ರತ್ಯೇಕವಾಸ) ಇಡುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಈ ಅವಧಿಯಲ್ಲಿ ಪ್ರಯಾಣಿಕರಲ್ಲಿ ಏನಾದರೂ ಅನಾರೋಗ್ಯದ ಲಕ್ಷಣಗಳು ಅಥವಾ ಎಬೋಲಾ ಸೋಂಕಿನ ಗುಣಲಕ್ಷಣಗಳು ಕಂಡುಬಂದರೆ, ತಕ್ಷಣವೇ ಅವರಿಗೆ ವೈದ್ಯಕೀಯ ತಪಾಸಣೆ ಹಾಗೂ ಸೂಕ್ತ ಟೆಸ್ಟ್‌ಗಳನ್ನು ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದರು.
ಬೆಂಗಳೂರು, ಮಂಗಳೂರಿನಲ್ಲಿ ವಿಶೇಷ ಆಸ್ಪತ್ರೆಗಳ ಸಿದ್ಧತೆ ವಿಶ್ವ ಆರೋಗ್ಯ ಸಂಸ್ಥೆಯು (WHO) ಎಬೋಲಾ ಕುರಿತು ಜಾಗತಿಕ ಎಚ್ಚರಿಕೆ ನೀಡಿರುವ ಬೆನ್ನಲ್ಲೇ, ರಾಜ್ಯ ಸರ್ಕಾರವು ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರು ಮತ್ತು ಮಂಗಳೂರು ನಗರಗಳಲ್ಲಿ ಎಬೋಲಾ ಚಿಕಿತ್ಸೆಗಾಗಿಯೇ ಪ್ರತ್ಯೇಕ ಆಸ್ಪತ್ರೆಗಳನ್ನು ಕಾಯ್ದಿರಿಸಲಾಗಿದೆ. ಅಷ್ಟೇ ಅಲ್ಲದೆ, ವೈದ್ಯಕೀಯ ಸಿಬ್ಬಂದಿಗೆ ಎಬೋಲಾ ನಿರ್ವಹಣೆ ಕುರಿತು ಈಗಾಗಲೇ ಸೂಕ್ತ ತರಬೇತಿ ನೀಡಲಾಗಿದ್ದು, ಅಗತ್ಯವಿರುವ ಪಿಪಿಇ ಕಿಟ್‌ಗಳು ಹಾಗೂ ಔಷಧಿಗಳನ್ನು ಮುಂಚಿತವಾಗಿಯೇ ದಾಸ್ತಾನು ಮಾಡಿಕೊಳ್ಳಲು ಸೂಚಿಸಲಾಗಿದೆ.
ವಿಮಾನ ನಿಲ್ದಾಣ ಮತ್ತು ಬಂದರುಗಳಲ್ಲಿ ಹೈ ಅಲರ್ಟ್ ಸದ್ಯದ ಮಾಹಿತಿಯ ಪ್ರಕಾರ, ಭಾರತೀಯರು ಹೆಚ್ಚಾಗಿ ವಾಸಿಸುವ ಗಲ್ಫ್ ದೇಶಗಳಲ್ಲಾಗಲಿ ಅಥವಾ ನಮ್ಮ ನೆರೆಹೊರೆಯ ದೇಶಗಳಲ್ಲಾಗಲಿ ಎಬೋಲಾ ಸೋಂಕು ಕಾಣಿಸಿಕೊಂಡಿಲ್ಲ. ಇದು ಕೇವಲ ಆಫ್ರಿಕಾ ರಾಷ್ಟ್ರಗಳಲ್ಲಿ ಮಾತ್ರ ಗಂಭೀರ ಸ್ವರೂಪ ಪಡೆದುಕೊಂಡಿದೆ. ಆದರೂ ಮುನ್ನೆಚ್ಚರಿಕೆಯಾಗಿ ರಾಜ್ಯದ ಪ್ರಮುಖ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳು ಹಾಗೂ ಬಂದರುಗಳಲ್ಲಿ ಪ್ರಾಥಮಿಕ ಹಂತದ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ. ವಿದೇಶ ಪ್ರವಾಸ ಮುಗಿಸಿ ಹಿಂದಿರುಗುವ ಪ್ರತಿಯೊಬ್ಬ ಪ್ರಯಾಣಿಕರ ಮೇಲೂ ಹೆಚ್ಚಿನ ನಿಗಾ ಇರಿಸಲಾಗುವುದು ಎಂದು ಸಚಿವರು ವಿವರಿಸಿದರು.
ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಕ್ರಮ ಎಬೋಲಾ ಹರಡುವಿಕೆಯನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರ ಆರೋಗ್ಯ ಇಲಾಖೆಯು ದೇಶದ ಎಲ್ಲಾ ರಾಜ್ಯಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಕೇಂದ್ರ ಸರ್ಕಾರವು ಈಗಾಗಲೇ ಅಗತ್ಯ ಮಾರ್ಗಸೂಚಿ ಹಾಗೂ ಸಲಹೆಗಳನ್ನು ರಾಜ್ಯಗಳಿಗೆ ರವಾನಿಸಿದೆ. ಈ ಕೇಂದ್ರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿರುವ ಕರ್ನಾಟಕ ಆರೋಗ್ಯ ಇಲಾಖೆಯು, ರಾಜ್ಯದಲ್ಲಿ ಸೋಂಕು ಪ್ರವೇಶಿಸದಂತೆ ತಡೆಯಲು ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ ಎಂದು ದಿನೇಶ್ ಗುಂಡೂರಾವ್ ಅವರು ಸಾರ್ವಜನಿಕರಿಗೆ ಧೈರ್ಯ ತುಂಬಿದ್ದಾರೆ.








