ಬೆಂಗಳೂರು : ಕಲ್ಯಾಣ ಕರ್ನಾಟಕದಲ್ಲಿ ಶೈಕ್ಷಣಿಕ ಕ್ರಾಂತಿ ಪ್ರಾರಂಭವಾಗಿದ್ದು, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಒದಗಿಸುವ ಉದ್ದೇಶದಿಂದ ದ್ವಿಭಾಷಾ ಬೋಧನಾ ವಿಧಾನವನ್ನು ಅಳವಡಿಸಲು ನಮ್ಮ ಸರ್ಕಾರವು ನಿರ್ಧರಿಸಿದ್ದು ಶಿಕ್ಷಣ ಕ್ಷೇತ್ರದಲ್ಲಿ ಇದೊಂದು ಐತಿಹಾಸಿಕ ಹೆಜ್ಜೆಯಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಪ್ರಸಕ್ತ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ 872 ಶಾಲೆಗಳಲ್ಲಿ 1ನೇ ತರಗತಿಯಿಂದಲೇ ಕನ್ನಡ ಮತ್ತು ಆಂಗ್ಲ ಮಾಧ್ಯಮ ತರಗತಿಗಳನ್ನು ಆರಂಭಿಸುವ ಮೂಲಕ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಭದ್ರಬುನಾದಿ ಹಾಕಿದೆ. ಇದರಿಂದ ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಹೆಚ್ಚಿನ ಪ್ರಗತಿ ಸಾಧಿಸಲು ಈ ದ್ವಿಭಾಷಾ ಬೋಧನಾ ವ್ಯವಸ್ಥೆಯು ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ.
ಕಲ್ಯಾಣ ಭಾಗದಲ್ಲಿ ಕಲಿಕಾ ಸೌಲಭ್ಯ ವಂಚಿತ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಿ, ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಸೃಷ್ಟಿಸಲು ನಮ್ಮ ಸರ್ಕಾರ ಸದಾ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.