ಮಂಡ್ಯ: ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಹೆಚ್. ಏನ್ ನಾಗಮೋಹನ್ ದಾಸ್ ಏಕಸದಸ್ಯ ವಿಚಾರಣ ಆಯೋಗದ ನಿರ್ದೇಶನದಂತೆ ದತ್ತಾಂಶ ಶೇಖರಿಸುವ ಸಮೀಕ್ಷೆಯು ಜಿಲ್ಲೆಯಲ್ಲಿ ಮೇ 5 ರಿಂದ ಪ್ರಾರಂಭವಾಗಿದ್ದು, ಶೇ 26 ರಷ್ಟು ಮಾತ್ರ ಸಾಧನೆಯಾಗಿರುತ್ತದೆ. ಸಮೀಕ್ಷೆಯನ್ನು ಚುರುಕುಗೊಳಿಸುವಂತೆ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಮುಖಂಡರುಗಳ ಸಭೆ ನಡೆಸಿ ಮಾತನಾಡಿದರು.
ಜಿಲ್ಲೆಯ ಎಲ್ಲಾ ಮನೆಗಳಿಗೂ ಭೇಟಿ ನೀಡಿ ಸಮೀಕ್ಷೆ ನಡೆಸಿ, ಯಾವುದೇ ಕಾರಣಕ್ಕೂ ಪರಿಶಿಷ್ಟ ಜಾತಿ ಕುಟುಂಬದವರು ಜಾತಿ ಗಣತಿ ಸಮೀಕ್ಷೆಯಿಂದ ಯಾರೂ ವಂಚಿತರಾಗದಂತೆ ಸಮೀಕ್ಷೆ ನಡೆಸಿ ಎಂದರು.
2011 ರ ಜನಗಣತಿಯ ಪ್ರಕಾರ ಜಿಲ್ಲೆಯಲ್ಲಿ 61,423 ಪರಿಶಿಷ್ಟ ಜಾತಿಯ ಮನೆಗಳಿದ್ದು, 15,973 ಮನೆಗಳಿಗೆ ಮಾತ್ರ ಭೇಟಿ ನೀಡಿ ಸಮೀಕ್ಷೆ ನಡೆಸಲಾಗಿದೆ. ಪ್ರತಿ ದಿನ ಆಯಾ ತಾಲ್ಲೂಕಿನ ತಹಶೀಲ್ದಾರ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಗತಿ ಕುರಿತು ಪರಿಶೀಲನೆ ನಡೆಸಿ ಶೇ 100 ರಷ್ಟು ಸಧನೆ ಹಾಗೂ ಆಯಾ ದಿನ ನಿಗದಿಪಡಿಸಿರುವ ಗುರಿ ಸಾಧಿಸಬೇಕು ಎಂದು ನಿರ್ದೇಶನ ನೀಡಬೇಕು ಎಂದರು.
ಸಮೀಕ್ಷೆಗೆ 1889 ಗಣತಿದಾರರನ್ನು ನೇಮಕ ಮಾಡಲಾಗಿದೆ. ಸಮೀಕ್ಷೆ ನಡೆಸುವ ಸಂದರ್ಭದಲ್ಲಿ ತಹಸಿಲ್ದಾರ್, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು ಕ್ಷೇತ್ರ ಶಿಕ್ಷಣಾಧಿಕಾರಿಗಳು, ನೋಡಲ್ ಅಧಿಕಾರಿಗಳು ಗಣತಿದಾರರು ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳದಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು, ಪ್ರತಿದಿನದ ಸಮೀಕ್ಷೆಯ ವಿವರಗಳನ್ನು ಖುದ್ದಾಗಿ ಜಿಲ್ಲಾಡಳಿತಕ್ಕೆ ನೀಡಬೇಕು, ಮುಂದಿನ ಮೂರು ದಿನಗಳಲ್ಲಿ ಜಿಲ್ಲೆಯಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಅವರ ಮನೆಗಳಿಗೆ ಭೇಟಿ ನೀಡಿ ಸಮೀಕ್ಷೆಯನ್ನು ನಡೆಸಬೇಕು ಎಂದು ಗಡುವು ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದ ಮೂರ್ತಿ, ಉಪ ವಿಭಾಗಾಧಿಕಾರಿ ಶಿವಮೂರ್ತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ರಾಜಮೂರ್ತಿ, ನಗರಸಭೆ ಪೌರಾಯುಕ್ತ ಪಂಪಶ್ರೀ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.