ಬೆಳಗಾವಿ: ಇಂದಿನಿಂದ ಪ್ರಾರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಬೇಕಿದೆ. ಪ್ರಮುಖವಾಗಿ ನಾಡಿನ ರೈತರು ಸಂಕಷ್ಟದಲ್ಲಿದ್ದಾರೆ. ಆ ಕುರಿತು ಚರ್ಚೆ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಸರಕಾರದ ನಿರ್ಲಕ್ಷ್ಯದಿಂದ ಕಬ್ಬು ಬೆಳೆಗಾರರು, ಮೆಕ್ಕೆ ಜೋಳ ಬೆಳೆಗಾರರು, ಭತ್ತ ಬೆಳೆಯುವ ರೈತರು, ತೊಗರಿ ಬೆಳೆಗಾರರು ಸಂಕಷ್ಟ ಅನುಭವಿಸಬೇಕಿದೆ ಎಂದು ಆಕ್ಷೇಪಿಸಿದರು.
ಕಾಂಗ್ರೆಸ್ ಪಕ್ಷವು ಚುನಾವಣೆ ಸಂದರ್ಭದಲ್ಲಿ ನಿರುದ್ಯೋಗ ನಿರ್ಮೂಲನೆ ಮಾಡುತ್ತೇವೆ. ಲಕ್ಷಾಂತರ ಯುವಕರಿಗೆ ಉದ್ಯೋಗ ನೀಡುವುದಾಗಿ ಭರವಸೆ ಕೊಟ್ಟಿತ್ತು. ಅದು ಈಡೇರಿಲ್ಲ ಎಂದು ಟೀಕಿಸಿದರು. ನೇಕಾರರ ಸಮಸ್ಯೆ, ರಾಜ್ಯದ ಅಭಿವೃದ್ಧಿ ವಿಚಾರ- ಇವೆಲ್ಲವು ಅಧಿವೇಶನದಲ್ಲಿ ಚರ್ಚೆ ಆಗಬೇಕಿದೆ. ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳ ಬಗ್ಗೆಯೂ ಚರ್ಚೆ ಮಾಡುವವರಿದ್ದೇವೆ ಎಂದು ತಿಳಿಸಿದರು.
ಪ್ರಶ್ನೆಗೆ ಉತ್ತರ ನೀಡಿದ ಅವರು, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಬಹಳ ನಿಸ್ಸೀಮರಿದ್ದಾರೆ. ರಾಜ್ಯ ಸರಕಾರದ ವೈಫಲ್ಯಗಳನ್ನು ಮುಚ್ಚಿ ಹಾಕುವ ಸಲುವಾಗಿ ಪ್ರತಿ ಸಂದರ್ಭದಲ್ಲಿ ಕೇಂದ್ರವನ್ನು ದೂರುತ್ತಾರೆ; ಅಲ್ಲದೇ ಪ್ರಧಾನಮಂತ್ರಿಗಳಿಗೆ ಪತ್ರ ಬರೆಯುವುದರಲ್ಲೂ ನಿಸ್ಸೀಮರಿದ್ದಾರೆ. ಇದರ ನಡುವೆ, ತಾವು ರಾಜ್ಯದ ಮುಖ್ಯಮಂತ್ರಿ ಎಂಬುದನ್ನು ಮರೆತೇ ಬಿಟ್ಟಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ವೈಫಲ್ಯಗಳನ್ನು ಮುಚ್ಚಿ ಹಾಕುವ ಸಲುವಾಗಿ ಈ ನಾಟಕ ಮಾಡುತ್ತಿದ್ದಾರೆ. ಇವೆಲ್ಲವನ್ನೂ ಸದನದಲ್ಲಿ ಚರ್ಚೆ ಮಾಡುತ್ತೇವೆ ಎಂದು ನುಡಿದರು.
KSCA ಚುನಾವಣೆ: ಶಿವಮೊಗ್ಗ ವಿಭಾಗದ ಸಂಚಾಲಕರಾಗಿ ಡಿಎಸ್ ಅರುಣ್ ಭರ್ಜರಿ ಗೆಲುವು








