ಬೆಂಗಳೂರು : ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿರುವ ಸ್ಕ್ಯಾನಿಂಗ್ ಕೇಂದ್ರಗಳು ಕಂಡುಬಂದಲ್ಲಿ ಅವುಗಳ ವಿರುದ್ಧ ಯಾವುದೇ ಮುಲಾಜಿಲ್ಲದೆ ಪ್ರಕರಣವನ್ನು ದಾಖಲಿಸುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ ಜಗದೀಶ ಅವರು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು.
ಇಂದು ತಮ್ಮ ಕಚೇರಿಯ ಸಭಾಂಗಣದಲ್ಲಿ ನಡೆದ ಗರ್ಭಪೂರ್ವ ಮತ್ತು ಪ್ರಸವಪೂರ್ವ ಪತ್ತೆ ತಂತ್ರ ವಿಧಾನಗಳು (ಲಿಂಗ ಆಯ್ಕೆ ನಿಷೇಧ) ಕಾಯ್ದೆ 1994ರ ಅಡಿಯಲ್ಲಿ ಬೆಂಗಳೂರು ನಗರ ಜಿಲ್ಲಾ ಮಟ್ಟದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾಯ್ದೆ ಅಡಿ ಜಿಲ್ಲಾಮಟ್ಟದಲ್ಲಿ ರಚಿಸಲಾಗಿರುವ ಸಮಿತಿ ಸದಸ್ಯರನ್ನು ಒಳಗೊಂಡಂತೆ ಜಿಲ್ಲೆಯ ವಿವಿಧ ಸ್ಕ್ಯಾನಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಅಸಮರ್ಪಕ ದಾಖಲೆ ನಿರ್ವಹಣೆ ಹಾಗೂ ಲಿಂಗಪತ್ತೆ ಮಾಡುತ್ತಿರುವುದು ಕಂಡುಬಂದಲ್ಲಿ ಅಂತಹ ಕೇಂದ್ರಗಳನ್ನು ಮುಟ್ಟುಗೊಲು ಹಾಕಿಕೊಳ್ಳುವಾಗ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಜಿಲ್ಲಾಧಿಕಾರಿಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ರವೀಂದ್ರನಾಥ್ ಮೇಟಿ ಅವರಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಸಂಭವಿಸಬಹುದಾದ ಲೋಪ ದೋಷಗಳನ್ನು ಸುಧಾರಿಸಿಕೊಳ್ಳುವಂತೆ ಅವರು ಸಲಹೆ ನೀಡಿದರು.
ಪ್ರಕರಣಗಳನ್ನು ನ್ಯಾಯಾಲಯದ ಸಮ್ಮುಖದಲ್ಲಿಟ್ಟು ಕಾಯ್ದೆಯನ್ನು ಉಲ್ಲಂಘಿಸಿದವರಿಗೆ ತಪ್ಪದೇ ಶಿಕ್ಷೆಯಾಗುವಂತೆ ಮಾಡಲು ವಿಷಯದ ಕುರಿತು ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದೆ ಎಂದು ಅಭಿಪ್ರಾಯ ಪಟ್ಟ ಜಿಲ್ಲಾಧಿಕಾರಿಗಳು ನ್ಯಾಯವಾದಿಗಳು, ನ್ಯಾಯಾಧೀಶರು ಸೇರಿದಂತೆ ವೈದ್ಯಕೀಯ ಕ್ಷೇತ್ರದ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ಅರಿವು ಕಾರ್ಯಾಗಾರವನ್ನು ಏರ್ಪಡಿಸುವಂತೆ ಸೂಚಿಸಿದರು.
ಈ ಸಭೆಯಲ್ಲಿ ಬೆಂಗಳೂರು ನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ರವೀಂದ್ರನಾಥ ಎಂ. ಮೇಟಿ, ಜಿ, ಬೆಂಗಳೂರು ನಗರ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಸಿರಾಜುದ್ದೀನ್ ಮದನಿ, ಕೆ.ಸಿ ಜನರಲ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ| ಶೀಲಾ ಮಾನೆ, ಮೆಡಿಕಲ್ ಜೆನೆಟಿಸ್ಟ್ ಡಾ|| ಚೇತನ್, ಕೆ.ಎ.ಎಸ್.ಪಿ.ಎ.ಎಸ್ ವಕೀಲರಾದ ಸುಮನ ಬಲಿಗಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕರಾದ ಪಲ್ಲವಿ ಹೊನ್ನಾಪುರ, ವಿಝನ್ ಬೆಂಗಳೂರು ಟ್ರಸ್ಟ್,ಎನ್.ಜಿ.ಓ,ದ ವಸಂತ ಕುಮಾರ್, ಸುಮಂಗಲಿ ಸೇವಾಶ್ರಮ ಎನ್.ಜಿ.ಓ, ದ ಸುಶೀಲಮ್ಮ, ಕೆ.ಆರ್.ಪುರ ಸಾರ್ವಜನಿಕ ಆಸ್ಪತ್ರೆಯ ರೇಡಿಯಾಲಜಿಸ್ಟ್ ಡಾ|| ಲೀಲಾ, ಆರ್.ಪಿ, ಬೆಂಗಳೂರು ನಗರ ಜಿಲ್ಲೆಯ ಐ.ಆರ್.ಐ.ಎ ಡಾ|| ವಿಜಯ ಸಾರಥಿ ರವರು ಉಪಸ್ಥಿತರಿದ್ದರು.