ಬೆಂಗಳೂರು : ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿ ವಿಚಾರದಲ್ಲಿ ಜನರಿಗೆ ಕಿರುಕುಳ ನೀಡುವುದು ಕಂಡುಬಂದರೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ವಿಕಾಸಸೌಧದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, “ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳು 59 ಸಾವಿರ ಕೋಟಿ ರೂ. ಸಾಲ ನೀಡಿವೆ. ಅಲ್ಲದೆ, ತಮ್ಮ ಸಾಮರ್ಥ್ಯ ವಿಸ್ತರಿಸಿಕೊಳ್ಳುವ ಸಲುವಾಗಿ ಆರ್ಬಿಐ ಗೈಡ್ಲೈನ್ಸ್ ಉಲ್ಲಂಘಿಸಿ ಸಾಲ ನೀಡುತ್ತಿವೆ. ಸಾಲ ನೀಡುವಾಗ ಸಾಲ ಪಡೆದವರ ಆರ್ಥಿಕ ಸಾಮರ್ಥ್ಯವನ್ನು ಕಡೆಗಣಿಸಲಾಗುತ್ತಿರುವುದು ಅಹಿತಕರ ಪ್ರಸಂಗಗಳಿಗೆ ಕಾರಣವಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.
ಓರ್ವ ವ್ಯಕ್ತಿಗೆ 2ಲಕ್ಷಕ್ಕಿಂತ ಹೆಚ್ಚು ಸಾಲ ನೀಡಬಾರದು ಎಂದು ಆರ್ಬಿಐ ಗೈಡ್ಲೈನ್ಸ್ ಇದೆ. ಇದನ್ನು ಯಾರೂ ಅನುಸರಿಸುತ್ತಿಲ್ಲ. ಓರ್ವ ವ್ಯಕ್ತಿಗೆ 5-6 ಲಕ್ಷ ರೂ. ಸಾಲ ನೀಡಲಾಗುತ್ತಿದೆ. ಈ ಮೂಲಕ ಬಡವರನ್ನು ಸಾಲದ ಸುಳಿಗೆ ಸಿಲುಕಿಸಲಾಗುತ್ತಿದೆ. ಸಾಲ ಮರುಪಾವತಿ ಮಾಡದಿದ್ದರೆ ಮೈಕ್ರೋ ಫೈನಾನ್ಸ್ ಕಂಪೆನಿಗಳ ಅಸ್ಥಿತ್ವಕ್ಕೂ ತೊಂದರೆಯಾಗಲಿದೆ. ಹೀಗಾಗಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಗಳು ಈ ವಾರದೊಳಗೆ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರ ಜೊತೆಗೆ ಸಭೆ ನಡೆಸಿ ಸಾಲ ವಸೂಲಾತಿಗೆ ಆರ್ಬಿಐ ನಿಗದಿಪಡಿಸಿರುವ ಮಾದರಿ ಕಾರ್ಯಾಚರಣೆಯನ್ನು ಪಾಲನೆ ಮಾಡಲು ಹಾಗೂ ಬೇಜಾಬ್ದಾರಿಯಿಂದ ಸಾಲ ನೀಡುವುದನ್ನೂ ನಿಗ್ರಹಿಸಲು ಸೂಚಿಸಲಾಗಿದೆ ಎಂದರು.
ಮೈಕ್ರೋ ಫೈನಾನ್ಸ್ ಕಂಪೆನಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಕೇಂದ್ರ ಸರ್ಕಾರ ಯಾವುದೇ ವಿಶೇಷ ಅಧಿಕಾರ ನೀಡಿಲ್ಲ. ಆದರೆ, ರಾಜ್ಯ ಸರ್ಕಾರವೇ ತನ್ನ ಅಧಿಕಾರದ ಮಿತಿಯಲ್ಲಿ ಬೇರೆ ಬೇರೆ ಕಾನೂನುಗಳ ಮೂಲಕ ಮೈಕ್ರೋ ಫೈನಾನ್ಸ್ಗಳ ಅಕ್ರಮಗಳಿಗೆ ಕಡಿವಾಣ ಹಾಕಲಿದೆ. ಇಂತಹ ಕಂಪೆನಿಗಳ ಅವ್ಯಾಹತ ಅಕ್ರಮಗಳನ್ನು ಕಂಡು ರಾಜ್ಯ ಸರ್ಕಾರ ಸುಮ್ಮನೆ ಕೂರಲು ಸಾಧ್ಯವಿಲ್ಲ. ಇದನ್ನು ಹೀಗೆ ಬಿಟ್ರೆ ಮುಂದಿನ ದಿನಗಳಲ್ಲಿ ಇನ್ನೂ ದೊಡ್ಡ ಮಟ್ಟದ ಅನಾಹುತಗಳು ಸಂಭವಿಸುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ತಿಳಿಸಿದರು.
ಮಾಲೀಕತ್ವದ ಗ್ಯಾರಂಟಿಗೆ ದರ್ಖಾಸ್ತು ಪೋಡಿ ಅಭಿಯಾನ..!
ದಶಕಗಳ ಹಿಂದೆ ಜಮೀನು ಮಂಜೂರು ಆಗಿದ್ದರೂ ಸಹ ಸರಿಯಾದ ದಾಖಲೆ ಇಲ್ಲದವರಿಗೆ ಜಮೀನಿನ ಮಾಲೀಕತ್ವದ ಗ್ಯಾರಂಟಿ ನೀಡುವ ಸಲುವಾಗಿ ದರ್ಖಾಸ್ತು ಪೋಡಿ ಕಾರ್ಯಕ್ರಮವನ್ನು ಅಭಿಯಾನ ಮಾದರಿಯಲ್ಲಿ ಜಾರಿಗೊಳಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
ಡಿಸೆಂಬರ್ ಮೊದಲ ವಾರದಿಂದಲೇ ದರ್ಖಾಸ್ತು ಪೋಡಿ ಅಭಿಯಾನ ಶುರುವಾಗಿದ್ದು, 26ಸಾವಿರ ಮಂಜೂರಿದಾರರ ಜಮೀನುಗಳನ್ನು ಸರ್ವೇಗೆ ಅಂಕಿತ ಹಾಕಲಾಗಿದೆ. ಈ ಪೈಕಿ 5 ಸಾವಿರ ಜನರಿಗೆ ಈಗಾಗಲೇ ಸರ್ವೇ ಮುಗಿಸಿದ್ದೇವೆ. ಈ ಎಲ್ಲರಿಗೂ ಹೊಸ ಆರ್ಟಿಸಿ, ಪಹಣಿ ಹಾಗೂ ನಕ್ಷೆ ನೀಡಲಾಗುವುದು. ಇದು ಜಮೀನಿನ ಮಾಲೀಕತ್ವದ ಗ್ಯಾರಂಟಿಯಾಗಿದ್ದು, ಈ ಅಭಿಯಾನಕ್ಕೆ “ನನ್ನ ಭೂಮಿ” ಎಂದು ಹೆಸರಿಡಲಾಗಿದೆ ಎಂದು ಮಾಹಿತಿ ನೀಡಿದರು.
ಕಳೆದ ಮೂರು ವರ್ಷದಲ್ಲಿ 5 ಸಾವಿರ ಜನರಿಗೆ ಪೋಡಿ ಮಾಡಿಕೊಡಲಾಗಿತ್ತು. ಆದರೆ, ಕಾಂಗ್ರೆಸ್ ಸರ್ಕಾರದ ಕಳೆದ ಎರಡು ತಿಂಗಳಲ್ಲಿ 5 ಸಾವಿರ ಜನರಿಗೆ ಪೋಡಿ ದುರಸ್ಥಿ ಮಾಡಲಾಗಿದೆ. ನಮ್ಮ ಗುರಿ ದೊಡ್ಡದಿದೆ. ಕನಿಷ್ಟ 5 ರಿಂದ 7 ಲಕ್ಷ ಕುಟುಂಬಗಳಿಗೆ ಪೋಡಿ ದುರಸ್ಥಿಗೊಳಿಸಬೇಕು ಎಂಬುದು ನಮ್ಮ ಗುರಿಯಾಗಿದ್ದು, ಎಲ್ಲಾ ಜಿಲ್ಲೆಗಳಲ್ಲೂ ಅಭಿಯಾನ ಮಾದರಿಯಲ್ಲಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ ಹಾಗೂ ಕಂದಾಯ ಆಯುಕ್ತರಾದ ಸುನೀಲ್ ಕುಮಾರ್ ಉಪಸ್ಥಿತರಿದ್ದರು.
BIG NEWS: ತಹಶೀಲ್ದಾರ್-ಎಸಿ ಕೋರ್ಟ್ ಕೇಸ್ ಮುಗಿಸಲು 6 ತಿಂಗಳು ಡೆಡ್ ಲೈನ್: ಸಚಿವ ಕೃಷ್ಣಬೈರೇಗೌಡ
SHOCKING : ಹಾಸ್ಟೆಲ್ ನಲ್ಲಿ `ಲೋ ಬಿಪಿ’ಯಿಂದ ಕುಸಿದು ಬಿದ್ದು 8 ನೇ ತರಗತಿ ವಿದ್ಯಾರ್ಥಿ ಸಾವು.!