ಇಂದೋರ್: ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಮಧ್ಯಪ್ರದೇಶದ ಸಚಿವ ವಿಜಯ್ ಶಾ ವಿರುದ್ಧ ಇಂದೋರ್ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹೈಕೋರ್ಟ್ ಆದೇಶದ ಮೇರೆಗೆ ಮನ್ಪುರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ಹಿತಿಕಾ ವಾಸಲ್ ಪಿಟಿಐಗೆ ಖಚಿತಪಡಿಸಿದ್ದಾರೆ.
ಸೆಕ್ಷನ್ 152 (ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟು ಮಾಡುವ ಕೃತ್ಯ), 196 (1) (ಬಿ) (ವಿವಿಧ ಸಮುದಾಯಗಳ ನಡುವಿನ ಪರಸ್ಪರ ಸಾಮರಸ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಕೃತ್ಯ), 197 (1) (ಸಿ) (ಸಮುದಾಯದ ಸದಸ್ಯರ ಬಗ್ಗೆ ಮಾತನಾಡುವುದು) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಸಚಿವ ವಿಜಯ್ ಶಾ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ಮಾಡಿದೆ.
ಇಂದೋರ್ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಸೋಮವಾರ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಖುರೇಷಿ ಅವರ ಹೆಸರನ್ನು ಉಲ್ಲೇಖಿಸದೆ ಶಾ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಕರ್ನಲ್ ಖುರೇಷಿ ನಿಯಮಿತ ಪತ್ರಿಕಾಗೋಷ್ಠಿಗಳಲ್ಲಿ ಭಾರತೀಯ ಸಶಸ್ತ್ರ ಪಡೆಗಳು ಪ್ರಾರಂಭಿಸಿದ ‘ಆಪರೇಷನ್ ಸಿಂಧೂರ್’ ವಿವರಗಳನ್ನು ಹಂಚಿಕೊಂಡಿದ್ದರು.








