ಚೆನ್ನೈ: ಭಾರತ ತಂಡದ ಮಾಜಿ ಆಲ್‌ರೌಂಡರ್ ವಿಜಯ್ ಶಂಕರ್ ಅವರು ಶುಕ್ರವಾರದಂದು (ಮೇ 22) ಭಾರತೀಯ ದೇಶಿ ಕ್ರಿಕೆಟ್ (Domestic Cricket) ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ (IPL) ಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ. ಜಾಗತಿಕ ಮಟ್ಟದ ಇತರ ಟಿ20 ಫ್ರಾಂಚೈಸಿ ಲೀಗ್‌ಗಳಲ್ಲಿ ಆಡುವ ಹೊಸ ಅವಕಾಶಗಳನ್ನು ಹುಡುಕುವ ಉದ್ದೇಶದಿಂದ ಅವರು ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.
35 ವರ್ಷದ ತಮಿಳುನಾಡು ಮೂಲದ ಈ ಆಟಗಾರ, ಸಾಮಾಜಿಕ ಜಾಲತಾಣವಾದ ‘ಎಕ್ಸ್’ (X) ನಲ್ಲಿ ಭಾವುಕ ಪತ್ರವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ 25 ವರ್ಷಗಳ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿದ್ದಾರೆ.
2019ರ ಐಸಿಸಿ ಏಕದಿನ ವಿಶ್ವಕಪ್‌ಗಾಗಿ ಭಾರತ ತಂಡವನ್ನು ಪ್ರಕಟಿಸಿದಾಗ, ಅಂದಿನ ಆಯ್ಕೆ ಸಮಿತಿ ಮುಖ್ಯಸ್ಥ ಎಂ.ಎಸ್.ಕೆ. ಪ್ರಸಾದ್ ಅವರು ವಿಜಯ್ ಶಂಕರ್ ಅವರನ್ನು ‘ತ್ರೀ-ಡೈಮೆನ್ಷನಲ್’ (3D) ಅಂದರೆ ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್ ಮೂರರಲ್ಲೂ ಅತ್ಯುತ್ತಮ ಪ್ರದರ್ಶನ ನೀಡಬಲ್ಲ ಆಟಗಾರ ಎಂದು ಕರೆದಿದ್ದರು.
ಆ ವಿಶ್ವಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ತಮ್ಮ ಮೊದಲ ಎಸೆತದಲ್ಲೇ ವಿಕೆಟ್ ಪಡೆದು ವಿಜಯ್ ಶಂಕರ್ ಇತಿಹಾಸ ಸೃಷ್ಟಿಸಿದ್ದರು. ಆದರೆ, ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದ ವೇಳೆ ಕಾಲ್ಬೆರಳ ಗಾಯಕ್ಕೆ ತುತ್ತಾಗಿ ಅವರು ಟೂರ್ನಿಯಿಂದ ಹೊರಬಿದ್ದಿದ್ದರು. ಅದಾದ ನಂತರ ಅವರಿಗೆ ಮತ್ತೆ ಭಾರತ ತಂಡದಲ್ಲಿ ಆಡಲು ಅವಕಾಶ ಸಿಗಲಿಲ್ಲ.








