ಮಂಡ್ಯ : ನಾಗಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಪ್ಪ ಗ್ರಾಮದಲ್ಲಿ ಡಿ.3 ರಂದು 150 ಕೋಟಿಗೂ ಹೆಚ್ಚಿನ ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಬುಧವಾರ ಹೇಳಿದರು.
ಕೊಪ್ಪ ಹೋಬಳಿಯ ಕೌಡ್ಲೆ ಗ್ರಾಮದಲ್ಲಿ ಪಶು ಆಸ್ಪತ್ರೆಯ ನೂತನ ಕಟ್ಟಡ ಹಾಗೂ ಕೌಡ್ಲೆ – ಗಟ್ಟಹಳ್ಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಕೊಪ್ಪ ಹೋಬಳಿಯ 8 ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಅಂದಾಜು 150 ಕೋಟಿಗೂ ಹೆಚ್ಚಿನ ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ಜನ ಸಂಪರ್ಕ ಸಭೆಯನ್ನು ಆಯೋಜಿಸಲಾಗಿದೆ ಎಂದರು. ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದ್ದು, ಹೀಗಾಗಿ ಸಮಯಾವಕಾಶದ ಕೊರತೆಯಿಂದ ಎಲ್ಲಾ ಗ್ರಾಮಗಳಿಗೆ ತೆರಳಿ ಕಾಮಗಾರಿಗಳಿಗೆ ಚಾಲನೆ ನೀಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಕೊಪ್ಪದಲ್ಲೇ ಎಲ್ಲಾ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಅಂದು ಜೊತೆಗೆ ಜನ ಸಂಪರ್ಕ ಸಭೆಯನ್ನು ಸಹ ಜಿಲ್ಲಾಡಳಿತ, ತಾಲೂಕು ಆಡಳಿತದ ಸಹಯೋಗದಲ್ಲಿ ಆಯೋಜಿಸಲಾಗಿದೆ. ಎಲ್ಲಾ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಸ್ಥಳದಲ್ಲಿದ್ದು, 8 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಸಾರ್ವಜನಿಕರು ತಮ್ಮ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಅರ್ಜಿ ಸಲ್ಲಿಸಬಹುದು. ಸಾಧ್ಯವಾದರೆ ಸ್ಥಳದಲ್ಲೆ ಸಮಸ್ಯೆಗೆ ಪರಿಹಾರ ಒದಗಿಸಲಾಗುವುದು. ಇದಲ್ಲದೇ ತಮ್ಮ ಸಮಸ್ಯೆಗೆ ಪರಿಹಾರ ಸಿಗದೇ ಹೋದರೆ ಅಂತಹ ಅರ್ಜಿಗಳನ್ನು ಅಧಿಕಾರಿಗಳು ತಮ್ಮ ಪೋನ್ ಮೂಲಕ ಸಂಪರ್ಕಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.
ಇನ್ನು ಮುಖ್ಯಮಂತ್ರಿ ಸ್ಥಾನದ ಗೊಂದಲದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಪಕ್ಷದ ಹೈಕಮಾಂಡ್ ಈ ವಿಚಾರವಾಗಿ ಕೆಲ ದಿನಗಳಲ್ಲೇ ಈ ಸಮಸ್ಯೆಗೆ ಮುಕ್ತಿ ನೀಡಿ ಎಲ್ಲವನ್ನು ಸರಿಪಡಿಸುತ್ತೆ. ಆದರೆ, ವಿರೋಧ ಪಕ್ಷಗಳಿಗೆ ಬೇರೆ ಕೆಲಸವಿಲ್ಲದಿರುವುದರಿಂದ ಜನರಲ್ಲಿ ಇಲ್ಲ ಸಲ್ಲದ ಗೊಂದಲ ಸೃಷ್ಟಿಸುತ್ತಿದೆ ಎಂದು ವಿಪಕ್ಷಗಳ ವಿರುದ್ಧ ಕಿಡಿಕಾರಿದರು.
ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯದೆ ಶಾಸಕರ ಖರೀದಿ ಕೇಂದ್ರ ತೆರೆಯುತ್ತಿದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಕೆಂಡಾಮಂಡಲರಾದ ಸಚಿವ ಚಲುವರಾಯಸ್ವಾಮಿ ಕೇಂದ್ರ ಸರ್ಕಾರ ಎಂಎಸ್ಪಿ ಯಿಂದ ಮಾಡೋದಕ್ಕೆ ಅನುಮತಿ ಕೊಡಬೇಕಿತ್ತು ಎಲ್ಲಿ ಕೊಟ್ಟಿದೆ. ಕೆ.ಎಂ.ಎಫ್ ಮೂಲಕ ಮೆಕ್ಕೆಜೋಳ ಖರೀದಿ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಮಾಡುವ ಜವಾಬ್ದಾರಿಯನ್ನು ಮಾಡದೇ ಇದ್ರೆ ಏನು ಮಾಡೋದು. ಈ ಬಗ್ಗೆ ರಾಜ್ಯದಿಂದ ಸಂಸದರಾಗಿ ಆಯ್ಕೆಯಾಗಿ ಮಂತ್ರಿಗಳಾಗಿರುವವರು ಸಹ ಬಾಯಿ ಬಿಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
ಇದೇ ರೀತಿ ಮಲತಾಯಿ ಧೋರಣೆ ಅನುಸರಿಸುತ್ತಿದ್ದ ಕೇಂದ್ರ ಸರ್ಕಾರ 2023 ರಲ್ಲಿ ರಾಜ್ಯದಲ್ಲಿ ಬರಗಾಲ ಸೃಷ್ಟಿಯಾಗಿತ್ತು. ಆಗ ಎನ್ಡಿಆರ್ಎಫ್ ನಿಧಿಯಲ್ಲಿ ಪರಿಹಾರ ನೀಡುವಂತೆ ಮನವಿ ಮಾಡಲಾಗಿತ್ತು. ಆದ್ರೆ ನಮ್ಮ ಮನವಿಗೆ ಕಿಂಚಿತ್ತೂ ಮನ್ನಣೆ ನೀಡಲಿಲ್ಲ. ಹೀಗಾಗಿ, ವಿಧಿಯಿಲ್ಲದೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಹಿನ್ನೆಲೆಯಲ್ಲಿ ಅಲ್ಪ ಪ್ರಮಾಣದ ಪರಿಹಾರ ಪಡೆಯುವಂತಾಯಿತು. ಕೇಂದ್ರ ಸರ್ಕಾರ ಯಾವುದೇ ಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಿಲ್ಲ ರಾಜ್ಯದ ವಿರುದ್ಧ ನಿರಂತರವಾಗಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಕೇಂದ್ರ ಸರ್ಕಾರ ಹಾಗೂ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು.
ಇದೇ ವೇಳೆ ರಾಜ್ಯ ಸಣ್ಣ ಕೈಗಾರಿಕೆಗಳ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಪಶು ಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಡಾ. ಶಿವಲಿಂಗಯ್ಯ, ಸಹಾಯಕ ನಿರ್ದೇಶಕ ಡಾ. ಗೋವಿಂದ್, ಡಾ. ಶ್ರೀನಿವಾಸ್, ಮುಖ್ಯ ಪಶು ವೈದ್ಯಾಧಿಕಾರಿ ಕಾರ್ತಿಕ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಮನು, ಉಪಾಧ್ಯಕ್ಷೆ ರತ್ನಮ್ಮ, ತಾ.ಪಂ ಮಾಜಿ ಉಪಾಧ್ಯಕ್ಷ ಬೆಕ್ಕಳಲೆ ರಘು, ಮನ್ ಮುಲ್ ಮಾಜಿ ನಿರ್ದೇಶಕ ಕುಮಾರ್ ಕೊಪ್ಪ, ನಾಗಮಂಗಲ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿವಾಕರ್, ಮುಖಂಡರಾದ ಗಟ್ಟಹಳ್ಳಿ ಹರೀಶ್ ಸೇರಿದಂತೆ ಮತ್ತಿತರರು ಇದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ
ಎತ್ತರ ಜಿಗಿತದಲ್ಲಿ ಚಿನ್ನದ ಪದಕ ಗೆದ್ದ ಸಾಗರ ಟೌನ್ ಠಾಣೆ ಪೊಲೀಸ್ ಪುತ್ರಿ ಪ್ರೇಕ್ಷಾ ಗೌಡ, ರಾಷ್ಟ್ರ ಮಟ್ಟಕ್ಕೆ ಆಯ್ಕೆ
BIG NEWS : ರಾಜ್ಯದಲ್ಲಿ ಅವಕಾಶ ಸಿಕ್ಕರೆ ದಲಿತರನ್ನು ‘CM’ ಮಾಡುತ್ತೇವೆ : ಸಚಿವ ಕೆಜೆ ಜಾರ್ಜ್ ಹೇಳಿಕೆ








