ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯವನ್ನು ಸರ್ಕಾರ ಘೋಷಣೆ ಮಾಡಿತ್ತು. ಈ ಬಗ್ಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶವನ್ನು ಹೊರಡಿಸಲಾಗಿದೆ.
ಈ ಕುರಿತಂತೆ ಶಿಕ್ಷಣ ಇಲಾಖೆಯ ಆಯುಕ್ತರಿಂದ ಆದೇಶ ಹೊರಡಿಸಲಾಗಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಉಚಿತ ವಿದ್ಯುತ್ ಮತ್ತು ನೀರಿನ ಸೌಲಭ್ಯವನ್ನು ಒದಗಿಸಲು ನಮ್ಮ ಸರ್ಕಾರವು ನಿರ್ಧರಿಸಿದೆ. ಇದರಿಂದ ರಾಜ್ಯದ 46,829 ಸರ್ಕಾರಿ ಶಾಲೆಗಳು ಮತ್ತು 1,234 ಪದವಿ ಪೂರ್ವ ಕಾಲೇಜುಗಳಿಗೆ ಅನುಕೂಲವಾಗಲಿದೆ. ಈ ಉದ್ದೇಶಕ್ಕಾಗಿ ಒಟ್ಟು 25 ಕೋಟಿ ರೂ. ವೆಚ್ಚವಾಗಲಿದೆ ಎಂದಿದ್ದಾರೆ.
ಮುಂದುವರೆದು ಶಾಲೆಗಳು ಶಿಕ್ಷಣಕ್ಕೆ ಪ್ರಥಮ ವೇದಿಕೆಯಾಗಿದ್ದು, ರಾಜ್ಯದ ಬಡ, ಮಧ್ಯಮ ವರ್ಗದ ಕುಟುಂಬಗಳ ಮಕ್ಕಳು ವಿದ್ಯಾಭ್ಯಾಸ ಪಡೆಯಲು ಸರ್ಕಾರಿ ಶಾಲೆಗಳು ಪ್ರಮುಖ ಪಾತ್ರವಹಿಸುತ್ತಿದ್ದು, ಸರ್ಕಾರಿ ಶಾಲೆಗಳ ಉನ್ನತೀಕರಣ ಹಾಗೂ ಅವುಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು “ಗೃಹ ಜ್ಯೋತಿ” ಯೋಜನೆಯಡಿ ವಿದ್ಯುಚ್ಛಕ್ತಿಯನ್ನು ಉಚಿತವಾಗಿ ಒದಗಿಸುತ್ತಿರುವ ರೀತಿಯಲ್ಲಿಯೇ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೂ ಸಹ ಉಚಿತ ವಿದ್ಯುತ್ ಸೌಲಭ್ಯ ಒದಗಿಸಲು, ಉಲ್ಲೇಖ(1 ಮತ್ತು 3)ರಲ್ಲಿ ಸರ್ಕಾರದಿಂದ ಆದೇಶ ಹೊರಡಿಸಲಾಗಿರುತ್ತದೆ ಎಂದಿದೆ.
ಈ ಕುರಿತು ಸದರಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಉಲ್ಲೇಖ(4)ರ ಸರ್ಕಾರದ ನಿರ್ದೇಶನದಂತೆ ಆಯಾ ಸಂಬಂಧಪಟ್ಟ ಸರ್ಕಾರಿ ಶಾಲೆಗಳ ಮುಖ್ಯೋಪಾಧ್ಯಾಯರುಗಳು ತಮ್ಮ ಶಾಲೆಯು ಒಳಪಡುವ ವಿದ್ಯುತ್ ಸರಬರಾಜು ಕಂಪನಿಗಳ ಉಪ ವಿಭಾಗ / ಶಾಖಾ ಕಚೇರಿಯಲ್ಲಿ ಶಾಲೆಯ ವಿದ್ಯುತ್ ಸ್ಥಾವರಗಳ ಮಾಹಿತಿಯನ್ನು (RR ಸಂಖ್ಯೆ ಮತ್ತು ಬಳಕೆದಾರರ ID ಸಂಖ್ಯೆ ಕಡ್ಡಾಯವಾಗಿ ದಿನಾಂಕ: 31/07/2024 ರೊಳಗೆ ಆದ್ಯತೆ ಮೇರೆಗೆ ನೊಂದಣಿ ಮಾಡಿಸುವಂತೆ ಸೂಚಿಸಿದ್ದಾರೆ.
ಮುಂದುವರೆದು ಸರ್ಕಾರಿ ಶಾಲೆಗಳಲ್ಲಿ ಉಳಿಕೆಯಾಗುವ ನಿರ್ವಹಣಾ ಅನುದಾನದಿಂದ ಶಾಲೆಗಳ ಗುಣಮಟ್ಟ ಅಭಿವೃದ್ಧಿಪಡಿಸಿ ಮಕ್ಕಳ ದಾಖಲಾತಿಯನ್ನು ಹೆಚ್ಚಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲು ಹಾಗೂ ಗುಣಾತ್ಮಕ ಶಿಕ್ಷಣಕ್ಕೆ ಒತ್ತು ನೀಡುವಂತೆ ಸೂಚಿಸಿದೆ. ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕ/ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಶಾಲೆಗಳಿಗೆ ಉಚಿತವಾಗಿ ಒದಗಿಸಲಾಗಿರುವ ವಿದ್ಯುತ್ ಸೌಲಭ್ಯವನ್ನು ಸಮರ್ಪಕವಾಗಿ ಬಳಕೆ ಮಾಡುವಂತೆ ಹಾಗೂ ಸಾಧ್ಯವಾದಷ್ಟು ಮಿತವಾಗಿ ಅಗತ್ಯಕ್ಕೆ ತಕ್ಕಂತೆ ಮಾತ್ರ ಬಳಕೆ ಮಾಡಲು ಸೂಚಿಸುತ್ತಾ, ಈ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿ ಯಾವುದೇ ರೀತಿಯಲ್ಲಿ ಸಂಪನ್ಮೂಲಗಳು ಪೋಲಾಗದಂತೆ ಎಚ್ಚರ ವಹಿಸುವಂತೆ ಸೂಚಿಸಿದ್ದಾರೆ.
ಕೃಷಿ ಸೇರಿದಂತೆ ಹಲವು ಕ್ಷೇತ್ರಗಳಿಗೆ ನೆರವಾಗುವ ‘ಸ್ಕೈಡೆಕ್ ಪ್ಲಾಟ್ ಫಾರ್ಮ್’ ಪರಿಚಯಿಸಿದ ಆಸ್ಟರಿಯಾ ‘ಏರೋಸ್ಪೇಸ್’
ರಾಜ್ಯದ ‘ಗ್ರಾಮೀಣ ಜನತೆ’ಗೆ ಗುಡ್ ನ್ಯೂಸ್: ‘ಗ್ರಾಮಠಾಣ’ ಒಳಗಿನ, ಹೊರಗಿನ ‘ಆಸ್ತಿ ಅಳತೆ’ಗೆ ಅವಕಾಶ