ಮಂಡ್ಯ : ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ವೈದ್ಯರು ಲಭ್ಯವಿದ್ದಾಗ ಶಿಬಿರದಲ್ಲಿ ಪಾಲ್ಗೊಂಡು ಉಚಿತ ಆರೋಗ್ಯದ ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಸಕ ಕೆ.ಎಂ.ಉದಯ್ ಹೇಳಿದರು.
ಮದ್ದೂರು ನಗರದ ಸಂಜೀವಿನಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಭಾನುವಾರ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತಿಚಿನ ದಿನಗಳಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳು ಜನರ ಪಾಲಿಗೆ ಸಂಜೀವಿನಿಯಂತಾಗಿದೆ. ದಿನದಿಂದ ದಿನಕ್ಕೆ ಬಿಪಿ, ಶುಗರ್, ಹೃದ್ರೋಗ ಹಾಗೂ ಕಿಡ್ನಿಯಂತಹ ಹಲವು ಸಮಸ್ಯೆಗಳಿಗೆ ತುತ್ತಾಗುತ್ತಿರುವವರು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರುತ್ತಿದ್ದಾರೆ. ಇವು ಶ್ರೀಮಂತ ಖಾಯಿಲೆಗಳಾಗಿದ್ದು, ಬಡ ಜನರು ಆರ್ಥಿಕವಾಗಿ ಭರಿಸಲು ಅಸಾಧ್ಯವಾಗಿದೆ. ಹೀಗಾಗಿ ನಗರ ಹಾಗೂ ಗ್ರಾಮೀಣ ಭಾಗದ ಬಡ ಜನರಿಗೆ ಇಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರಗಳ ಮೂಲಕ ಚಿಕಿತ್ಸೆಗೆ ಒಳಪಡಿಸಿದಾಗ ಮಾತ್ರ ಅವರನ್ನು ಸಂಕಷ್ಟದಿಂದ ಪಾರು ಮಾಡಲು ಸಾಧ್ಯವಾಗಲಿದೆ ಎಂದರು.
ಈಗಾಗಲೇ ನಮ್ಮ ಉದಯ್ ಚಾರಿಟಬಲ್ ಟ್ರಸ್ಟ್ ಮೂಲಕ ಕೋವಿಡ್ ಸಂದರ್ಭದಲ್ಲಿ ಕ್ಷೇತ್ರದ ಮನೆ ಮನೆಗೆ ಔಷಧಿ ಕಿಟ್, ಆಂಬುಲೆನ್ಸ್ ಸೇವೆ ಹಾಗೂ ಆರೋಗ್ಯ ಶಿಬಿರಗಳನ್ನು ಆಯೋಜಿಸಲಾಗಿದ್ದು, ಮುಂದಿನ ದಿನಗಳಲ್ಲೂ ಸಹ ಇಂತಹ ಮಹತ್ವದ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಶಾಸಕ ಉದಯ್ ತಿಳಿಸಿದರು.

ಮುಖ್ಯ ಆರೋಗ್ಯಾಧಿಕಾರಿ ಬಿ.ಕೆ.ಪ್ರಸನ್ನ ಮಾತನಾಡಿ, ಇತ್ತಿಚಿನ ದಿನಗಳಲ್ಲಿ ಒತ್ತಡದಿಂದ ಬಳಲುತ್ತಿರುವವರು ಹೆಚ್ಚಾಗಿದ್ದಾರೆ. ಹಣವೊಂದೇ ಜೀವನವಲ್ಲಾ, ಆರೋಗ್ಯವೇ ಮುಖ್ಯ ಬಂಡವಾಳವಾಗಿದ್ದು, ಉತ್ತಮ ಆಹಾರ ಪದ್ಧತಿ ಅಳವಡಿಸಿಕೊಳ್ಳುವುದರ ಜತೆಗೆ ದಿನನಿತ್ಯ ಒಂದಿಲ್ಲೊಂದು ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಅಭಿಪ್ರಾಯಪಟ್ಟರು.
ಶಿಬಿರದಲ್ಲಿ 600 ಕ್ಕೂ ಹೆಚ್ಚು ಜನರು ಭಾಗಿಯಾಗಿ ಹೃದಯ, ಕಣ್ಣು, ಮೂಳೆ, ನರ, ಕಿಡ್ನಿ, ಸ್ತ್ರೀರೋಗ, ಚರ್ಮರೋಗ, ಮಕ್ಕಳು ಹಾಗೂ ಮಾನಸಿಕ ರೋಗ ತಜ್ಞ ವೈದ್ಯರಲ್ಲಿ ಚಿಕಿತ್ಸೆ ಪಡೆದುಕೊಂಡರು. ಹಾಗೂ ಉಚಿತವಾಗಿ ಶುಗರ್, ಬಿಪಿ ಮತ್ತು ಇ.ಸಿ.ಜಿ ತಪಾಸಣೆಯನ್ನು ಮಾಡಲಾಯಿತು. 46 ಮಂದಿ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ರಕ್ತದಾನ ಮಾಡಿದರು.
ಕಾರ್ಯಕ್ರಮದಲ್ಲಿ ಮನ್ ಮುಲ್ ನಿರ್ದೇಶಕ ಹರೀಶ್ ಬಾಬು, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ್, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ಬಸವರಾಜು, ಟಿಎಪಿಸಿಎಂಎಸ್ ಉಪಾಧ್ಯಕ್ಷ ಪಿ.ರಾಘವಾ ಆಡಳಿತಾಧಿಕಾರಿ ಮನೋಜ್ ಕುಮಾರ್, ಹುಲಿಗೆರೆಪುರ ಸೊಸೈಟಿ ಅಧ್ಯಕ್ಷ ಬೋರೇಗೌಡ, ಸಂಸ್ಥೆಯ ತಜ್ಞ ವೈದ್ಯರು, ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳು ಇದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ








