ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆ ಪೂರ್ಣಗೊಳ್ಳುವವರೆಗೂ ಜಿಲ್ಲೆಯಾದ್ಯಂತ ಎಲ್ಲ ತರಹದ ಕಲರ್ ಪೇಪರ್ ಬ್ಲಾಸ್ಟಿಂಗ್, ಪಟಾಕಿ, ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ.
ಜಿಲ್ಲೆಯಲ್ಲಿ ಕಳೆದ ಆಗಸ್ಟ್ 27ರಂದು ಹಿಂದೂ ಬಾಂಧವರು ಒಟ್ಟು 1,744 ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದು, ವಿವಿಧ ದಿನಾಂಕಗಳಂದು ವಿಸರ್ಜನೆ ಮಾಡಲಿದ್ದಾರೆ. ಸೆ.15 ರವರೆಗೆ ಒಟ್ಟು 20 ದಿನಗಳ ಕಾಲ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಮೆರವಣಿಗೆ ಮೂಲಕ ವಿಸರ್ಜನೆ ನಡೆಸಲಿದ್ದಾರೆ ಹಾಗೂ ಸೆ.05 ರಂದು ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು “ಈದ್ ಮಿಲಾದ್” ಹಬ್ಬವನ್ನು ಆಚರಿಸಲಿದ್ದಾರೆ. ಈ ಸಮಯದಲ್ಲಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆ, ಮೆರವಣಿಗೆ ಸಂದರ್ಭದಲ್ಲಿ ಕಲರ್ ಪೇಪರ್ ಬ್ಲಾಸ್ಟಿಂಗ್, ಪಟಾಕಿ, ಸಿಡಿಮದ್ದುಗಳನ್ನು ಸಿಡಿಸುವುದರಿಂದ ಅನ್ಯಕೋಮಿನವರ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡುವ, ಪ್ರಾರ್ಥನಾ ಸ್ಥಳಗಳಿಗೆ ಹಾನಿಯಾಗುವ ಸಾಧ್ಯತೆ ಇರುವುದರಿಂದ ಸೆ.15 ರವರೆಗೆ ಜಿಲ್ಲೆಯಾದ್ಯಂತ ಎಲ್ಲ ರೀತಿಯ ಕಲರ್ ಪೇಪರ್ ಬ್ಲಾಸ್ಟರ್, ಪಟಾಕಿ, ಸಿಡಿಮದ್ದು ಸಿಡಿಸುವುದನ್ನು ನಿಷೇಧಗೊಳಿಸಿ ಆದೇಶ ಹೊರಡಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕರು ಕೋರಿರುತ್ತಾರೆ.
ಹೀಗಾಗಿ ಸೆ. 15 ರವರೆಗೆ ಜಿಲ್ಲಾ ವ್ಯಾಪ್ತಿಯಲ್ಲಿ ನಡೆಯಲಿರುವ ಗಣಪತಿಯ ಶೋಭಯಾತ್ರೆ ಹಾಗೂ ವಿಸರ್ಜನಾ ಮೆರವಣಿಗೆ ಸಮಯದಲ್ಲಿ ಹಾಗೂ ಸೆ. 05 ರ ಈದ್ ಮಿಲಾದ್ ಹಬ್ಬದ ಸಮಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಯ್ದುಕೊಂಡು ಕೋಮು ಸೌಹಾರ್ಧತೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಚಿತ್ರದುರ್ಗ ಜಿಲ್ಲೆಯಾದ್ಯಂತ ಎಲ್ಲ ರೀತಿಯ ಕಲರ್ ಪೇಪರ್ ಬ್ಲಾಸ್ಟರ್, ಪಟಾಕಿ, ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ.ವೆಂಕಟೇಶ್ ಆದೇಶದಲ್ಲಿ ತಿಳಿಸಿದ್ದಾರೆ.