ನವದೆಹಲಿ/ಬೆಂಗಳೂರು: ಪಂಚರಾಜ್ಯಗಳ ಚುನಾವಣೆಯ ಭಾಗವಾಗಿ ಕೇರಳ, ಅಸ್ಸಾಂ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಇಂದು ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಇದರೊಂದಿಗೆ ಕರ್ನಾಟಕದ ದಾವಣಗೆರೆ ದಕ್ಷಿಣ, ಬಾಗಲಕೋಟೆ ವಿಧಾನಸಭೆ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು, ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಕೇರಳ: ಒಟ್ಟು 140 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಕಣದಲ್ಲಿ 890 ಅಭ್ಯರ್ಥಿಗಳಿದ್ದಾರೆ. ಸುಮಾರು 2.7 ಕೋಟಿ ಮತದಾರರು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ. ಇಲ್ಲಿ ಆಡಳಿತಾರೂಢ ಎಲ್‌ಡಿಎಫ್ ಮತ್ತು ಯುಡಿಎಫ್ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.
ಅಸ್ಸಾಂ: ಇಲ್ಲಿನ 126 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, 722 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಸುಮಾರು 2.5 ಕೋಟಿ ಮತದಾರರು ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ.
ಪುದುಚೇರಿ: 30 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, 294 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. ಒಟ್ಟು 9 ಲಕ್ಷ ಮತದಾರರಿದ್ದಾರೆ.
ಕರ್ನಾಟಕದ ಉಪಚುನಾವಣೆ:
ರಾಜ್ಯದ ಬಾಗಲಕೋಟೆ ಮತ್ತು ದಾವಣಗೆರೆ ಜಿಲ್ಲೆಗಳ ವ್ಯಾಪ್ತಿಯಲ್ಲೂ ಉಪಚುನಾವಣೆಯ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದೆ.
ಬಾಗಲಕೋಟೆ: ಒಟ್ಟು 2,59,797 ಮತದಾರರಿದ್ದು, ಇದಕ್ಕಾಗಿ 332 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.
ದಾವಣಗೆರೆ: ಇಲ್ಲಿನ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 284 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಈ ಪೈಕಿ 76 ಮತಗಟ್ಟೆಗಳನ್ನು ಅತಿ ಸೂಕ್ಷ್ಮ ಎಂದು ಗುರುತಿಸಲಾಗಿದೆ.
ಚುನಾವಣಾ ಆಯೋಗವು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಮತಗಟ್ಟೆಗಳ ಬಳಿ ಸಶಸ್ತ್ರ ಮೀಸಲು ಪಡೆಯನ್ನು ನಿಯೋಜಿಸಲಾಗಿದೆ.








